ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡಿಸೇಲ್ ದರವನ್ನು ಏರಿಕೆ ಮಾಡಿ ಜನ ಸಾಮಾನ್ಯರಿಗೆ ಬರೆ ಹಾಕುತ್ತಿದೆ ಎಂದು ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ವೇದಿಕೆ ಕಾರ್ಯಕರ್ತರು ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಶಿವಶಂಕರ್ ಪ್ರತಿನಿತ್ಯವೂ ಇಂಧನ ದರ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕುತ್ತಿದೆ. ಪೆಟ್ರೋಲ್ ಹಾಗೂ ಡಿಸೇಲ್ ದರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಳಿಕೆ ಆಗಿದೆ. ಆದರೆ ಸರ್ಕಾರ ಭಾರತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದರ ಹೆಚ್ಚಿಸುತ್ತಿರುವುದರಿಂದ ಜನರಿಗೆ ತೊಂದರೆ ಕೊಡುತ್ತಿದೆ ಎಂದು ದೂರಿದರು.
ಈಗಾಗಲೇ ಲಾಕ್‌ಡೌನ್‌ದಿಂದ ಜನರು ಬದುಕು ಸಾಗಿಸುವುದು ಕಷ್ಟಕರವಾಗಿದೆ. ಇಂಥದರಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿರುವುದು ಸರಿಯಲ್ಲ. ಕಳೆದ 10-12 ದಿನಗಳ ಅವಧಿಯಲ್ಲಿ ಇಂಧನ ದರ ಸುಮಾರು ೧೦. ರೂ.ವರೆಗೆ ಹೆಚ್ಚಿಗೆ ಆಗಿದೆ. ಸರ್ಕಾರ ಈ ದರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯ ಉಪಾಧ್ಯಕ್ಷ ಶಿವಶಂಕರ್, ಜಿಲ್ಲಾಧ್ಯಕ್ಷ ಚಂದ್ರಶೇಖರ್, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಹಾಗೂ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.