ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಹಾಗೂ ಕೊಕ್ಕಬರೆ ಗ್ರಾಮದಲ್ಲಿ ತಲೆದೋರಿದ್ದ ಕುಡಿಯುವ ನೀರಿನ ಸಮಸ್ಯೆಯನ್ನು ಗ್ರಾಮ ಪಂಚಾಯಿತಿ ಪಿಡಿಒ ಬಗೆಹರಿಸಿದ್ದಾರೆ.
ತಾಲೂಕು ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದ ಪರಿಣಾಮ ಅಂತರ್ಜಲ ಮಟ್ಟ ಕಡಿಮೆಯಾಗಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದೆ. ಈ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಕೊಕ್ಕಬರೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.
ಇದೇ ವೇಳೆ ಊರ ಜನರ ಬವಣೆಯನ್ನು ಅರಿತ ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಆಡಳಿತ ವರ್ಗದವರು ಮೂರು ಕೊಳವೆ ಬಾವಿಗೆ ಹೆಚ್ಚುವರಿಯಾಗಿ ಪೈಪ್ ಲೈನ್ ಅಳವಡಿಸಿ ದುರಸ್ತಿ ಪಡಿಸಿದ ಪರಿಣಾಮ ನೀರಿನ ಸಮಸ್ಯೆ ಬಗೆಹರಿದಿದೆ. ಜೊತೆಗೆ ಶಾಲಾ ಆವರಣದಲ್ಲಿದ್ದ ಮಿನಿ ಟ್ಯಾಂಕ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಹೆಚ್ಚುವರಿಯಾಗಿ ಮಿನಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.
ಒಟ್ಟಾರೆ ಕಾಡಂಚಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.