ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಹಿಂದೂ ಸಂಘಟನೆಗಳ ಪ್ರತಿಭಟನೆ ಬೆನ್ನಲ್ಲೇ ಎನ್‌ಕೌಂಟರ್.. ಆರೋಪಿಯ ಕಾಲಿಗೆ ಗುಂಡೇಟು..
ಧಾರವಾಡ: ಹುಬ್ಬಳ್ಳಿಯ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ಸದ್ದಾಂ ಹುಸೇನ್ ಎಂಬಾತನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಬಂಧನ ಕಾರ್ಯಾಚರಣೆ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ರಿವಾಲ್ವರ್‌ಗೆ ಕೆಲಸ ನೀಡಿದ್ದಾರೆ.
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಕುರಿತಂತೆ ನವನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆಯೇ ಪ್ರಕರಣದ ಆರೋಪಿ ಸದ್ದಾಂ ಹುಸೇನ್ ಪರಾರಿಯಾಗಿದ್ದ. ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದೆ.
ಇನ್ನೊಂದೆಡೆ ಆರೋಪಿ ಸದ್ದಾಂ ಹುಸೇನ್ ಬಗ್ಗೆ ಸುಳಿವರಿತ ಪೊಲೀಸರು ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಆತನನ್ನು ಸೆರೆ ಹಿಡಿದಿದ್ದಾರೆ. ಬಳಿಕ ವಾಹನ ಹತ್ತುವಾಗ ಆರೋಪಿಯು ಅಧಿಕಾರಿಗಳ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಪರಾರಿಯಾಗಲು ಯತ್ನಿಸಿದ್ದಾನೆ. ಆ ಸಂದರ್ಭದಲ್ಲಿ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂಗಮೇಶ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.
ಗುಂಡೇಟಿನಿಂದ ಗಾಯಗೊಂಡಿರುವ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.