ಬೆಂಗಳೂರು: ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್ ಮತ್ತು ಡಿಪ್ಲೊಮೋ ತರಗತಿಗಳ ಎಲ್ಲ ವರ್ಷಗಳ ವಿದ್ಯಾರ್ಥಿಗಳಿಗೆ ಆಫ್‌ಲೈನ್ ತರಗತಿಗಳನ್ನು ಜನವರಿ 15ರಿಂದ ಆರಂಭವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವರೂ ಆದ ಅಶ್ವತ್ಥನಾರಾಯಣ, ಅಂತಿಮ ವರ್ಷದ ಆಫ್‌ಲೈನ್ ತರಗತಿಗಳು ಈಗಾಗಲೇ ಆರಂಭವಾಗಿ ಯಶಸ್ವಿಯಾಗಿ ನಡೆಯುತ್ತಿವೆ. ಉಳಿದಂತೆ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳು ಕೂಡ ತಮಗೂ ನೇರ ತರಗತಿಗಳನ್ನು ಆರಂಭಿಸುವಂತೆ ಒತ್ತಾಯ ಮಾಡುತ್ತಿದ್ದರು. ಅದರಂತೆ, ಈ ತಿಂಗಳಿನಿಂದಲೇ ತರಗತಿಗಳನ್ನು ಆರಂಭ ಮಾಡಲಾಗುತ್ತದೆ ಎಂದರು.
ಎಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಥಮ, ದ್ವಿತೀಯ ಹಾಗೂ ಮೂರನೇ ವರ್ಷದ ಆಫ್‌ಲೈನ್ ತರಗತಿಗಳು ಕೂಡ ಇದೇ ದಿನ ಶುರುವಾಗುತ್ತಿವೆ ಎಂದು ಡಿಸಿಎಂ ಮಾಹಿತಿ ನೀಡಿದರು.
ಇದರ ಜತೆಗೆ, ತರಗತಿಗಳು ಆರಂಭವಾಗುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳನ್ನು ತೆರೆಯಲಾಗುತ್ತಿದೆ. ಕಾಲೇಜುಗಳ ಬಸ್ ವ್ಯವಸ್ಥೆಯೂ ಪುನಾರಂಭವಾಗುತ್ತಿದೆ ಎಂದ ಅವರು, ಕೋವಿಡ್ ಮಾರ್ಗಸೂಚಿಯಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಕಾಲೇಜುಗಳಲ್ಲಿ ಕೋವಿಡ್ ತಪಾಸಣೆ, ಸ್ಯಾನಿಟೈಸ್ ವ್ಯವಸ್ಥೆ, ದೈಹಿಕ ಅಂತರ ಪಾಲನೆ ಸೇರಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳೂ ಇರುತ್ತವೆ ಎಂದರು.