ನವದೆಹಲಿ: ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಣೆಯನ್ನು ಕೇಂದ್ರ ಪ್ರಕಟಿಸಿದೆ.
ಲೋಕಸಭೆಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ದೇಶದಲ್ಲಿ ಮಹಿಳೆಯರ ಅಭ್ಯುದಯಕ್ಕೆ ಹಲವು ಯೋಜನೆಗಳನ್ನು ಪ್ರಕಟಿಸಿದರು. ಇದೇ ವೇಳೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೂ ಆಶಾದಾಯಕ ಕ್ರಮ ಪ್ರಕಟಸಲಿಸಿದರು.
ಆಯುಷ್ಮಾನ್ ಭಾರತ ಯೋಜನೆಯು ಇನ್ನು ಮುಂದೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೂ ಅನ್ವಯವಾಗಲಿದೆ ಎಂದು ತಿಳಿಸಿದರು.
ಬಜೆಟ್‌ನಲ್ಲಿ ನಾರಿ ಶಕ್ತಿಯ ಬಗ್ಗೆ ಪ್ರಸ್ತಾಪ ಮಾಡಿದ ನಿರ್ಮಲಾ ಸೀತಾರಾಮನ್, ಕಳೆದ 10 ವರ್ಷಗಳಲ್ಲಿ ಉನ್ನತ ಶಿಕ್ಷಣದಲ್ಲಿ ಮಹಿಳೆಯರ ದಾಖಲಾತಿ ಶೇಕಡಾ 28ರಷ್ಟು ಹೆಚ್ಚಾಗಿದೆ ಎಂದರು. ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (STEM) ಕೋರ್ಸ್‌ಗಳಲ್ಲಿ ಹುಡುಗಿಯರು ಮತ್ತು ಮಹಿಳೆಯರು ಶೇಕಡಾ 43ರಷ್ಟು ದಾಖಲಾತಿಯನ್ನು ಹೊಂದಿದ್ದಾರೆ ಎಂದರು.
ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಸ್ಥಾನಗಳನ್ನು ಮೀಸಲಿಡಲಾಗುತ್ತದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಶೇಕಡಾ 70 ರಷ್ಟು ಮನೆಗಳನ್ನು ಮಹಿಳೆಯರಿಗೆ ನೀಡಲಾಗುತ್ತಿದೆ ಎಂದರು.