ಮಂಗಳೂರು: ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ ವಿರುದ್ದ ಎಫ್.ಐ.ಆರ್. ದಾಖಲಾಗಿದೆ.
ಮಂಗಳೂರಿನ ಕಾರ್ಪೊರೇಟರ್ ನೀಡಿದ ದೂರಿನ ಆಧಾರದಲ್ಲಿ ಕಾವೂರು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರು ಹಿಂದೂ ವಿರೋಧಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಮಂಗಳೂರಿನ ಕಾವೂರಿನಲ್ಲಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆಯ ವೇಳೆ, ಶಾಸಕ ಭರತ್ ಶೆಟ್ಟಿ ಅವರು ರಾಹುಲ್ ಗಾಂಧಿ ವಿರುದ್ದ ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಕಾರ್ಪೊರೆಟರ್ ನೀಡಿರುವ ದೂರಿನಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಂದು ಆಯುಕ್ತರು ಮಾಹಿತಿ ಒದಗಿಸಿದ್ದಾರೆ.