ಬೆಂಗಳೂರು: ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ. ಪ್ರಕರಣ ಬಗ್ಗೆ ವಿಚಾರಣೆ ನಡೆಸಿದ 42ನೇ ಎಸಿಎಂಎಂ ನ್ಯಾಯಾಲಯ ಸೋಮವಾರ ರೇವಣ್ಣ ಅವರಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.
ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ದ ಏಪ್ರಿಲ್ 28ರಂದು ದೂರು ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಹೆಚ್.ಡಿ.ರೇವಣ್ಣ ಅವರು ಜಾಮೀನು ಕೋರಿ 42ನೇ ಎಸಿಎಂಎಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜೆ. ಪ್ರೀತ್ ಅವರು ತೀರ್ಪನ್ನು ಕಾಯ್ದಿರಿಸಿದ್ದರು. ಸೋಮವಾರ ಆದೇಶ ಪ್ರಕಟಿಸಿದ ಕೋರ್ಟ್, ರೇವಣ್ಣ ಅವರಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. 5 ಲಕ್ಷ ರೂಪಾಯಿ ಮೊತ್ತದ ಬಾಂಡ್ ನೀಡಬೇಕು, ಅಷ್ಟೇ ಮೊತ್ತಕ್ಕೆ ಒಬ್ಬರ ಶ್ಯೂರಿಟಿ ಒದಗಿಸಬೇಕೆಂದೂ ಕೋರ್ಟ್ ಸೂಚಿಸಿದೆ.