ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆಯುವ ಬಗ್ಗೆ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ದೇವಾಲಯದ ಟ್ರಸ್ಟಿಗಳು ಹೈಕೋರ್ಟ್ ಮೊರೆಹೋಗಿದ್ದು, ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಪೀಠ, ಸರ್ಕಾರದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.
ಬುಧವಾರ ಈ ಅರ್ಜಿ ವಿಚಾರಣೆಗೆ ಬಂದಿದ್ದು, ದೇವಾಲಯದ ಟ್ರಸ್ಟ್ ಪರ ವಕೀಲರು, ಸರ್ಕಾರ ತನಿಖೆ ನಡೆಸದೆ ತರಾತುರಿಯಲ್ಲಿ ಕ್ರಮ ಕೈಗೊಂಡಿದೆ. ಅಪೂರ್ಣ ಮಾಹಿತಿಯನ್ನು ಆಧರಿಸಿ ಸರ್ಕಾರ ಕ್ರಮಕೈಗೊಂಡಿದೆ ಎಂದು ನ್ಯಾಯಾಲಯದ ಗಮನಸೆಳೆದರು. ಆದರೆ, ಈ ಆರೋಪಗಳನ್ನು ನಿರಾಕರಿಸಿದ ಸರ್ಕಾರದ ಪರ ವಕೀಲರು, ಟ್ರಸ್ಟ್ನಿಂದ ಹಲವು ಬಾರಿ ಮಾಹಿತಿ ಕೇಳಲಾಗಿದೆ. ಆದರೆ ಯಾವುದೇ ಮಾಹಿತಿಯನ್ನು ಒದಗಿಸಲಾಗಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ವಾದ, ಪ್ರತಿವಾದ ಆಲಿಸಿದ ಹೈಕೋರ್ಟ್, ಸರ್ಕಾರತ ಕ್ರಮವನ್ನು ಎತ್ತಿಹಿಡಿಯಿತಲ್ಲದೆ, ಟ್ರಸ್ಟ್ ಅರ್ಜಿಯನ್ನು ವಜಾಗೊಳಿಸಿತು.