ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಂಕ್ರಾಂತಿಯ ಕೊಡುಗೆ ಪ್ರಕಟಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವು ಅತಿಥಿ ಉಪನ್ಯಾಸಕರ ಬೇಡಿಕೆಗೆ ಒಪ್ಪಿಗೆ ನೀಡಿದೆ. ಅದರಂತೆ ಉಪನ್ಯಾಸಕರ ಬೇಡಿಕೆಯ ಶಿಫಾರಸುಗಳಿಗೆ ಸಮ್ಮತಿ ಸೂಚಿಸಿ ಸಿಎಂ ಅವರು ಕಡತ ವಿಲೇವಾರಿ ಮಾಡಿದ್ದಾರೆ.
ಅತಿಥಿ ಉಪನ್ಯಾಸಕರ ಬಹು ದಿನಗಳ ಬೇಡಿಕೆ ಪರಿಶೀಲನೆ ಸಂಬಂಧ ರಚಿಸಲಾಗಿದ್ದ ಸಮಿತಿಯು ಮಾಡಿದ್ದ ಶಿಫಾರಸುಗಳ ಜಾರಿಗೆ ಹಣಕಾಸಿನ ಅನುಮೋದನೆ ನೀಡಿದೆ. ಇದನ್ನು ಆಧರಿಸಿ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಕರ್ನಾಟಕ ಸರ್ಕಾರದ ವತಿಯಿಂದ ಎಲ್ಲ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿಯ ಶುಭಾಶಯಗಳನ್ನು ಕೋರುತ್ತೇನೆ ಎಂದಿದ್ದಾರೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ, 5 ವರ್ಷಕ್ಕಿಂತ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿರುವ, ಯುಜಿಸಿ ಅರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರ ವೇತನವನ್ನು 32 ಸಾವಿರ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಎಂದಿದ್ದಾರೆ.
5 ವರ್ಷಕ್ಕಿಂತ ಕಡಿಮೆ ಅವಧಿಗೆ ಸೇವೆ ಸಲ್ಲಿಸಿರುವ, ಯುಜಿಸಿ ಅರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರ ವೇತನವನ್ನು 30 ಸಾವಿರ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
5 ವರ್ಷಕ್ಕಿಂತ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿರುವ, ಯುಜಿಸಿ ಅರ್ಹತೆ ಹೊಂದಿರದ ಅತಿಥಿ ಉಪನ್ಯಾಸಕರ ವೇತನವನ್ನು 28 ಸಾವಿರ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಇದೇ ವೇಳೆ, ಬಿಜೆಪಿ ಶಾಸಕ ರವಿಕುಮಾರ್ ಕೂಡಾ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯನಿರ್ವಹಿಸುತ್ತಿರುವವರಿಗೆ ರಾಜ್ಯ ಸರ್ಕಾರವು ಸಂಕ್ರಾಂತಿ ಹಬ್ಬದಂದು ಸಿಹಿ ಸುದ್ದಿ ನೀಡಿದೆ.
ರಾಜ್ಯದ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆಯಾದ ವೇತನವನ್ನು ಹೆಚ್ಚಳಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.1/2 pic.twitter.com/kS7DO8bMz3
— N Ravi Kumar (@nrkbjp) January 14, 2022