ಬೆಂಗಳೂರು: ಯುವ ಸಮುದಾಯದಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಸೂಕ್ತ ತನಿಖಾ ವರದಿ ನಡೆಸಿ, ವರದಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ.
ಯುವ ಸಮುದಾಯದಲ್ಲಿ ಅದರಲ್ಲೂ ಹಾಸನದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವರು, ಈ ಬಗ್ಗೆ ಸೂಕ್ತ ಹಾಗೂ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಹಾಸನದಲ್ಲಿ ಒಂದು ತಿಂಗಳಿಂದ ಸುಮಾರು ಜನ ಹೃದಯಾಘಾತದಿಂದ ಮೃತಪಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಪ್ರಕರಣಗಳೂ ಸೇರಿದಂತೆ ಈ ಹಿಂದಿನ ಘಟನೆಗಳ ಬಗ್ಗೆಯೂ ಸೂಕ್ತ ತನಿಖೆ ನಡೆಸಿ, ಅಧ್ಯಯನ ನಡೆಸಿ ಸಮಗ್ರ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ.
ಹಾಸನದಲ್ಲಿ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ ವರದಿಗಳು ಬಂದ ಕೂಡಲೇ ಹಾಸನ ವೈದ್ಯಕೀಯ ಸಂಸ್ಥೆ ವೈದ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಸಂಸ್ಥೆಯಲ್ಲಿ ಇದುವರೆಗೂ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಹಿಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೂ ಕೂಲಂಕಷವಾಗಿ ಪರಿಶೀಲನೆ ನಡೆಸಲು ನಿರ್ದೇಶನ ನೀಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಒಟ್ಟಾರೆಯಾಗಿ ಇಡೀ ರಾಜ್ಯದಲ್ಲಿ ಯುವ ಸಮುದಾಯದಲ್ಲಿ ಕಂಡುಬರುತ್ತಿರುವ ಹೃದಯಾಘಾತದ ಬಗ್ಗೆ ಸರ್ಕಾರ ಕೂಡ ನಿಗಾ ವಹಿಸುತ್ತಿದೆ. ರಾಜ್ಯದ 51 ಜಿಲ್ಲೆಗಳಲ್ಲಿ ಸ್ಟೆಮಿ (ST-Elevation Myocardial Infarction) ಯೋಜನೆ ಜಾರಿಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಗಮನ ಹರಿಸಲಾಗುವುದು ಎಂದು ಹೇಳಿದ್ದಾರೆ.
ಕರ್ನಾಟಕವನ್ನು ಆರೋಗ್ಯಕರ ರಾಜ್ಯವನ್ನಾಗಿ ಮಾಡಲು ನಮ್ಮ ಸರ್ಕಾರ ನಿರಂತರ ಕ್ರಮಗಳನ್ನು ಕೈಗೊಳ್ಳಲಿದೆ. ಮುಂದಿನ ದಿನಗಳಲ್ಲಿಯೂ ಇನ್ನೂ ಹೆಚ್ಚಿನ ಯೋಜನೆಗಳನ್ನು ಜಾರಿಗೆ ತರಲು ನಾವು ಬದ್ಧರಾಗಿದ್ದೇವೆ ಎಂದು ಸಚಿವ ಡಾ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.