ಬೆಂಗಳೂರು: ರಾಜ್ಯದಲ್ಲಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಮುಂದುವರಿದಿದೆ. ಇತ್ತೀಚೆಗಷ್ಟೇ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ, ಇದೀಗ (ನವೆಂಬರ್ 26) ಐಎಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಹೆಚ್ಚುವರಿ ಹೊಣೆಗಾರಿಕೆ ನೀಡಿ ಆದೇಶ ಹೊರಡಿಸಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾಗಿದ್ದ ಮಹೇಶ್ವರ ರಾವ್ ಎಂ. ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ಅಂಜುಮ್ ಪರ್ವೇಜ್ ಅವರಿಗೆ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಜೊತೆಗೆ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ಒಳಾಡಳಿತ (ಗೃಹ) ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರಾಗಿರುವ ಡಾ. ಗಿರೀಶ್ ದಿಲೀಪ್ ಬಡೋಲೆ ಅವರಿಗೆ ಇ-ಆಡಳಿತ, ವಿಜ್ಞಾನ ಮತ್ತು ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಗಳ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ಅಪರ್ಣಾ ರಮೇಶ್ ಅವರನ್ನು ವರ್ಗಾವಣೆ ಮಾಡಿ, ಬಿಎಂಟಿಸಿಯ ಮಾಹಿತಿ ತಂತ್ರಜ್ಞಾನ ನಿರ್ದೇಶಕರ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.















































































