ಬೆಂಗಳೂರು: ರಾಜ್ಯದ ತಾಯಿ ಮತ್ತು ಶಿಶು ಆರೋಗ್ಯ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಒಂದು ಪ್ರಮುಖ ಆದೇಶವನ್ನು ಹೊರಡಿಸಿದೆ. ಹಲವಾರು ಜಿಲ್ಲಾ ಆಸ್ಪತ್ರೆಗಳಲ್ಲಿ ರೇಡಿಯಾಲಜಿಸ್ಟ್‌ಗಳ ಕೊರತೆ ಇರುವುದನ್ನು ಗಮನಿಸಿ, ಸಾರ್ವಜನಿಕರಿಗೆ ಗುಣಮಟ್ಟದ ಪ್ರಸವಪೂರ್ವ ಮತ್ತು ಪ್ರಸವೋತ್ತರ ಸೇವೆಗಳನ್ನು ನೀಡಲು ಆರೋಗ್ಯ ಇಲಾಖೆಯ ಸೇವಾನಿರತ ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳಿಗೆ ಆರು ತಿಂಗಳ ಅಲ್ಟ್ರಾಸೋನೊಗ್ರಫಿ (Ultrasonography) ತರಬೇತಿ ನೀಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಈ ತರಬೇತಿಯನ್ನು ಪಿಸಿ ಮತ್ತು ಪಿಎನ್‌ಡಿಟಿ (PC & PNDT) ಕಾಯ್ದೆ ಹಾಗೂ 2014ರ ತರಬೇತಿ ನಿಯಮಗಳ ಅಡಿಯಲ್ಲಿ ಕಟ್ಟುನಿಟ್ಟಾಗಿ ನಡೆಸಲಾಗುವುದು. ಈ ಮಹತ್ವದ ಕಾರ್ಯಕ್ರಮಕ್ಕಾಗಿ ರಾಜ್ಯದ ಒಟ್ಟು 11 ಆಸ್ಪತ್ರೆಗಳನ್ನು ತರಬೇತಿ ಕೇಂದ್ರಗಳಾಗಿ ಗುರುತಿಸಲಾಗಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಜಯನಗರ ಸಾರ್ವಜನಿಕ ಆಸ್ಪತ್ರೆ, ಮಂಗಳೂರಿನ ಲೇಡಿ ಘೋಷನ್ ಮತ್ತು ವೆನ್ಲಾಕ್ ಆಸ್ಪತ್ರೆ, ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆ ಸೇರಿದಂತೆ ಚಿಕ್ಕಬಳ್ಳಾಪುರ, ಧಾರವಾಡ, ತುಮಕೂರು, ವಿಜಯಪುರ, ಬಳ್ಳಾರಿ, ಕೋಲಾರ ಮತ್ತು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗಳಲ್ಲಿ ಈ ತರಬೇತಿ ಲಭ್ಯವಿರಲಿದೆ. ಒಟ್ಟು 23 ಅಧ್ಯಾಪಕರ ಮಾರ್ಗದರ್ಶನದಲ್ಲಿ 69 ವೈದ್ಯಾಧಿಕಾರಿಗಳಿಗೆ ತರಬೇತಿ ನೀಡಲು ಗುರಿ ಹೊಂದಲಾಗಿದ್ದು, ಅಧ್ಯಾಪಕ ಮತ್ತು ವಿದ್ಯಾರ್ಥಿ ಅನುಪಾತವನ್ನು 1:3 ರಂತೆ ನಿಗದಿಪಡಿಸಲಾಗಿದೆ ಎಂದಿದ್ದಾರೆ.
ಈ ತರಬೇತಿಗೆ ಕೇವಲ ಇಲಾಖೆಯಲ್ಲಿ ಸೇವೆಯಲ್ಲಿರುವ ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳನ್ನು ಮಾತ್ರ ಪರಿಗಣಿಸಲಾಗುತ್ತಿದ್ದು, ಆಯ್ಕೆ ಪ್ರಕ್ರಿಯೆಯನ್ನು ಬಂಧಪತ್ರ ಕೋಶದ (Bond Enforcement Cell) ಸಮನ್ವಯದೊಂದಿಗೆ ನಡೆಸಲಾಗುತ್ತದೆ. ತರಬೇತಿ ಪಡೆದ ವೈದ್ಯರು ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಅಲ್ಟ್ರಾಸೋನೊಗ್ರಫಿ ಸೇವೆಗಳನ್ನು ನೀಡಬೇಕೆಂದು ಷರತ್ತು ವಿಧಿಸಲಾಗಿದೆ.
ಈ ತರಬೇತಿಗೆ ನಿಯೋಜನೆಗೊಂಡ ವೈದ್ಯರ ಸ್ಥಾನಕ್ಕೆ ಸಾರ್ವಜನಿಕ ಸೇವೆಗೆ ಅಡ್ಡಿಯಾಗದಂತೆ ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಿಸಿಕೊಳ್ಳಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯು (SIHFW) ಈ ಯೋಜನೆಯ ಸಂಪೂರ್ಣ ಮೇಲ್ವಿಚಾರಣೆಯನ್ನು ನಿರ್ವಹಿಸಲಿದೆ ಎಂದವರು ತಿಳಿಸಿದ್ದಾರೆ.



























































