ಲಕ್ನೋ: ಚಲಿಸುತ್ತಿದ್ದ ಸ್ಲೀಪರ್ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 9 ಮಂದಿ ಸಜೀವ ದಹನವಾಗಿರುವ ದಾರುಣ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ನಡೆದಿದೆ.
ಘಟನೆ ವೇಳೆ ಬಸ್ನಲ್ಲಿ ಸುಮಾರು 40ರಿಂದ 50 ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರಲ್ಲಿ ಆತಂಕ ಉಂಟಾಗಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್ಗೆ ವ್ಯಾಪಿಸಿದೆ.
ಪ್ರಾಣ ಉಳಿಸಿಕೊಳ್ಳಲು ಕೆಲವು ಪ್ರಯಾಣಿಕರು ಚಲಿಸುತ್ತಿದ್ದ ಬಸ್ನಿಂದ ಹೊರಕ್ಕೆ ಜಿಗಿದಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ಘಟನೆ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಗಾಯಗೊಂಡವರಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಘಟನೆಯ ಕಾರಣ ಪತ್ತೆಹಚ್ಚಲು ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.






































































