ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿರುವ ‘ಗ್ಯಾರೆಂಟಿ’ ಬಗ್ಗೆ ಅನೇಕಾನೇಕ ರೀತಿಯಲ್ಲಿ ಚರ್ಚೆ ಸಾಗಿದ್ದು, ಪರಿಪೂರ್ಣ ಜಾರಿ ಕುರಿತಂತೆ ಗೊಂದಲಗಳೂ ಉಂಟಾಗಿವೆ. ಆದೇನೇ ಆದರೂ ‘ಗ್ಯಾರೆಂಟಿ’ ಭರವಸೆಗಳ ಜಾರಿ ಖಚಿತ ಎಂದು ಸಿಎಂ-ಡಿಸಿಎಂ ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ‘ಗ್ಯಾರೆಂಟಿ’ ಜಾರಿಯ ತಯಾರಿ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು ಜೂನ್ 1ರ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನವಾಗುವ ಸಾಧ್ಯತೆಗಳ ಬಗ್ಗೆ ಸುಳಿವು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮಾಹಿತಿ ಹಂಚಿಕೊಂಡಿರುವ ಡಿ.ಕೆ. ಶಿವಕುಮಾರ್, ‘ನಾವು ಕೊಟ್ಟ ಮಾತಿನಂತೆ ‘ಗ್ಯಾರಂಟಿ’ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದರು. ಮುಖ್ಯಮಂತ್ರಿಯವರು ಹಣಕಾಸು ಸಚಿವಾಲಯದ ಜವಾಬ್ದಾರಿ ಹೊತ್ತಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದವರು ತಿಳಿಸಿದರು.
ನಮ್ಮದು ಜವಾಬ್ದಾರಿಯುತ ಸರ್ಕಾರ, ನಾವು ಈ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿ ಮಾಡುತ್ತೇವೆ ಎಂದ ಡಿಕೆಶಿ, ಯುವಕರು, ಮಹಿಳೆಯರಿಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುತ್ತೇವೆ. ಎಲ್ಲಾ ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡುತ್ತಿದ್ದು, ನಾನು ಕೂಡ ನನ್ನ ಸಚಿವಾಲಯಗಳ ಅಧಿಕಾರಿಗಳ ಸಭೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.