ಬೆಂಗಳೂರು: ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್ ಸರ್ಕಾರ ಹಾಲಿನ ಬೆಲೆಯನ್ನೂ ಲೀಟರಿಗೆ 3 ರೂಪಾಯಿ ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ಪಾಟ್ ಇಡುತ್ತಿದ್ದಾರೆ ಎಂದವರು ವ್ಯಂಗ್ಯವಾಡಿದ್ದಾರೆ.
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಹೆಚ್ಡಿಕೆ, ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು.ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ನೋಡಿ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ನದ್ದು ಕ್ಷುದ್ರ ವಿತ್ತನೀತಿ ಎಂದು ಮೊಣಚು ಪದಗಳಿಂದ ತಿವಿದಿದ್ದಾರೆ.
ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರ್ಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ ಎಂದು ಕುಮಾರಸ್ವಾಮಿ ಆಮಾಧಾನ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ ಎಂದು ಟೀಕಿಸಿರುವ ಹೆಚ್ಡಿಕೆ, ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ಸರ್ಕಾರದ ಕಾರ್ಯವೈಖರಿ ಬಗ್ಗೆ ಕುಟುಕಿದ್ದಾರೆ.
ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ.4/4#ಜನರ_ಬದುಕು_ಹಾಲಾಹಲ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023