ಮಂಗಳೂರು: ಕೇಂದ್ರ ಉಕ್ಕು ಸಚಿವಾಲಯದ ಅಧೀನದಲ್ಲಿರುವ ಮಂಗಳೂರಿನ ಕೆಐಒಸಿಎಲ್ (KIOCL) ಕಾರ್ಖಾನೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಖಾನೆಯ ಪ್ರಸ್ತುತ ಸ್ಥಿತಿಗತಿಗಳ ಕುರಿತು ಆಡಳಿತ ಮಂಡಳಿಯಿಂದ ಮಾಹಿತಿ ಪಡೆದ ಅವರು, ಕಾರ್ಮಿಕರೊಂದಿಗೆ ಸಂವಾದ ನಡೆಸಿ ಅಹವಾಲುಗಳನ್ನು ಆಲಿಸಿದರು.
ಕರ್ನಾಟಕ ಮತ್ತು ದೇಶದ ಹೆಮ್ಮೆಯ ಉಕ್ಕು ಸ್ಥಾವರಗಳಲ್ಲಿ ಒಂದಾದ ಕೆಐಒಸಿಎಲ್ ಅನ್ನು ಉಳಿಸಿ ಬೆಳೆಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ 2030ರ ವೇಳೆಗೆ ದೇಶದಲ್ಲಿ 300 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಗುರಿ ಹೊಂದಲಾಗಿದ್ದು, ಇದರ ಭಾಗವಾಗಿ ಕೆಐಒಸಿಎಲ್ ಮತ್ತೆ ಸುಸ್ಥಿತಿಗೆ ಬರಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಪಣಂಬೂರಿನಲ್ಲಿರುವ ಈ ವ್ಯೂಹಾತ್ಮಕ ಕಾರ್ಖಾನೆಯನ್ನು ಉಳಿಸುವುದು ಕೇಂದ್ರದಷ್ಟೇ ರಾಜ್ಯ ಸರ್ಕಾರದ ಜವಾಬ್ದಾರಿಯೂ ಆಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಶಾಸಕರು, ಜನಪ್ರತಿನಿಧಿಗಳು ಹಾಗೂ ಕಂಪನಿಯ ಅಧಿಕಾರಿಗಳು ಉಪಸ್ಥಿತರಿದ್ದರು.















































































