ಫೆಂಗಲ್ ಚಂಡಮಾರುತ; ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ
ಮಂಗಳೂರು: ಫೆಂಗಲ್ ಚಂಡಮಾರುತ ದಿಕ್ಕು ಬದಲಾಯಿಸಿದ್ದು ಅರಬ್ಬೀ ಸಮುದ್ರಕ್ಕೆ ಹೊಂದಿಕೊಂಡಿರುವ ರಾಜ್ಯಗಳಲ್ಲಿ ಮಂಗಳವಾರ ಭಾರೀ ಮಳೆಯಾಗುವ ಮುನ್ಸೂಚನೆ ವ್ಯಕ್ತವಾಗಿದೆ. ಬೆಳಿಗ್ಗೆಯಿಂದಲೇ ನಿರಂತರ ಮಳೆಯಾಗುತ್ತಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 3ರಂದು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುವರೆಗಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಮಂಗಳವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಕೊಡಗು ಜಿಲ್ಲೆಯ ಶಾಲೆಗಳಿಗೂ ಡಿ.3ರಂದು ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕೋಲಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೂ ಮಂಗಳವಾರ ರಜೆ ಘೋಷಿಸಲಾಗಿದೆ.
ನಿರಂತರ ಮಳೆ ಹಾಗೂ ವಿಪರೀತ ಚಳಿ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ದೃಷ್ಟಿಯಿಂದ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆ ಮೇರೆಗೆ ಈ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲೂ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.