ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಬಿರುಸಾಗಿದ್ದು, ಕಳೆದೆರಡು ವಾರಗಳಲ್ಲಿ ಹಲವು ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಕರ್ನಾಟಕದಲ್ಲಿ ಈ ಮಳೆ ಪರಿಸ್ಥಿತಿ ಆಗಸ್ಟ್ 6ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಲ್ಲೂ ಧಾರಾಕಾರ ಮಳೆಯ ಮುನ್ಸೂಚನೆ ಸಿಕ್ಕಿದೆ. ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದೇ ವೇಳೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಕೂಡ ಮಳೆಯಾಗುವ ಸಾಧ್ಯತೆಗಳಿವೆ. ಚಾಮರಾಜನಗರ, ಹಾಸನ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.






































































