ಮಂಗಳೂರು; ಕರಾವಳಿಯಲ್ಲಿ ಭಾರೀ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ಮಂಗಳೂರು ಹೊರವಲಯದ ಉಳ್ಳಾಲ ಸಮೀಪ ಕುತ್ತಾರು ಮದನಿನಗರ ಎಂಬಲ್ಲಿ ಮನೆಯ ಗೋಡೆ ಕುಸಿದು ಬಿದ್ದು ನಾಲ್ವರು ಸಾವನ್ನಪ್ಪಿದ್ದಾರೆ.
ಬುಧವಾರ ಬೆಳಿಗ್ಗೆ ಈ ದುರ್ಘಟನೆ ಬೆಳಕಿಗೆ ಬಂದಿದೆ. ರಾತ್ರಿಯಿಡೀ ಭಾರಿ ಮಳೆ ಸುರಿದಿದ್ದು, ಇದರ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ಬಲಾಗಿದೆ. ಅಬೂಬಕ್ಕರ್ ಎಂಬವರಿಗೆ ಸೇರಿದ ಮನೆಯ ಗೋಡೆ ಕುಸಿದುಬಿದ್ದಿದ್ದು ಘಟನೆ ವೇಳೆ ಮನೆಯಲ್ಲಿದ್ದ ಸುಮಾರು 45 ವರ್ಷದ ಯಾಸಿರ್, ಪತ್ನಿ 40 ವರ್ಷದ ಮರಿಯಮ್ಮ, ಮಕ್ಕಳಾದ ರಿಫಾನ್ ಹಾಗೂ ರಿಯಾನಾ ಎಂಬವರು ಮೃತಪಟ್ಟಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ಕೈಗೊಂಡು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.