ಬೆಂಗಳೂರು: ಹೋಮಿಯೋಪತಿ ವೈದ್ಯ ಪದ್ಧತಿಯಲ್ಲಿ ಹೆಚ್ಚು ಸಂಶೋಧನೆ, ಅಧ್ಯಯನ ನಡೆಸಿ ಅದನ್ನು ದಾಖಲಾಗಿಸಬೇಕು. ಈ ಮೂಲಕ ಈ ವೈದ್ಯ ಪದ್ಧತಿಯ ಮಹತ್ವವನ್ನು ಜನರಿಗೆ ತಿಳಿಸಿಕೊಡಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ.
ಕೆಎಚ್ ಬಿ ಕಾಲೋನಿಯಲ್ಲಿ ಕರ್ನಾಟಕ ಹೋಮಿಯೋಪತಿ ಮಂಡಳಿಯ ನೂತನ ಆಡಳಿತ ಕಚೇರಿ ‘ಹೋಮಿಯೋ ಭವನ’ವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು. ಈ ಸಮಾರಂಭದಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಕೋವಿಡ್ ಸಮಯದಲ್ಲಿ ಬಹಳ ಜನರು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸರ್ಕಾರಿ ಹೋಮಿಯೋಪತಿ ಆಸ್ಪತ್ರೆಗಳಿಗೆ ಹೋಗಿ ಔಷಧಿ ಪಡೆದಿದ್ದಾರೆ. ಈ ರೀತಿ ಜನರು ಹೋಮಿಯೋಪತಿ ಕಡೆ ಆಸಕ್ತಿ ತೋರಿದ್ದಾರೆ. ಕೋವಿಡ್ ಸೋಂಕು ಆರಂಭವಾದ ಬಳಿಕ ಅಲೋಪತಿ ಮಾತ್ರವಲ್ಲದೆ, ಯುನಾನಿ, ಆಯುರ್ವೇದ, ಹೋಮಿಯೋಪತಿಗೂ ಬೇಡಿಕೆ ಹೆಚ್ಚಿದೆ. ಇಂತಹ ಸಮಯದಲ್ಲಿ ಹೋಮಿಯೋಪತಿ ಅಭ್ಯಾಸ ಮಾಡುತ್ತಿರುವವರು ಹೆಚ್ಚು ಸಂಶೋಧನೆಗಳನ್ನು ನಡೆಸಿ, ಅದನ್ನು ಜನರಿಗೆ ತಿಳಿಸಬೇಕು ಎಂದರು.
“ತೆಲಂಗಾಣದಲ್ಲಿ ಕೋವಿಡ್ ಪರೀಕ್ಷೆ, ಚಿಕಿತ್ಸೆಗೆ ಹಣ ಪಡೆಯಲಾಗುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ಕಳೆದ 9 ತಿಂಗಳಿಂದ ಉಚಿತವಾಗಿ ಕೋವಿಡ್ ಪರೀಕ್ಷೆ ನಡೆಯುತ್ತಿದೆ. ಸರ್ಕಾರದ ಶಿಫಾರಸು ಮೂಲಕ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದವರಿಗೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ, ಉಚಿತ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ವಿವರಿಸಿದರು.