ಧರ್ಮಶಾಲಾ: ಐಪಿಎಲ್ 2026ರ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 3 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಈ ಫಲಿತಾಂಶದಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 210 ರನ್ ಗಳಿಸಿತು. ಪ್ರಿಯಾಂಶ್ ಆರ್ಯ 33 ಎಸೆತಗಳಲ್ಲಿ 56 ರನ್ ಸಿಡಿಸಿ ಮಿಂಚಿದರೆ, ಶ್ರೇಯಸ್ ಅಯ್ಯರ್ ಹಾಗೂ ಕೂಪರ್ ಕೊನೊಲಿ ಕೂಡ ಉತ್ತಮ ಕೊಡುಗೆ ನೀಡಿದರು. ಆರಂಭಿಕ ಆಟಗಾರರಾದ ಪ್ರಿಯಾಂಶ್ ಆರ್ಯ ಮತ್ತು ಪ್ರಭ್ಸಿಮ್ರಾನ್ ಸಿಂಗ್ ಮೊದಲ ವಿಕೆಟ್‌ಗೆ 78 ರನ್‌ಗಳ ಜೊತೆಯಾಟ ನೀಡಿದರು.
ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಅಕ್ಸರ್ ಪಟೇಲ್ ಮತ್ತು ಡೇವಿಡ್ ಮಿಲ್ಲರ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಅಕ್ಸರ್ 57 ರನ್ ಹಾಗೂ ಮಿಲ್ಲರ್ 51 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಅಂತಿಮವಾಗಿ ಡೆಲ್ಲಿ 216 ರನ್ ಗಳಿಸಿ 3 ವಿಕೆಟ್‌ಗಳ ಜಯ ದಾಖಲಿಸಿತು.
























































