ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಐಪಿಎಲ್ ಟ್ರೋಫಿ ಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 4 ರಂದು ಸಂಭವಿಸಿದ ಕಾಲ್ತುಳಿತ ದುರಂತದ ಕುರಿತು ನ್ಯಾಯಾಂಗ ತನಿಖೆ ನಡೆಸಿದ್ದ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರ ಏಕಸದಸ್ಯ ತನಿಖಾ ಆಯೋಗ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.
ಈ ದುರಂತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದರು. ಘಟನೆಯ ತೀವ್ರತೆಯನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ, ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದು, ಒಂದು ತಿಂಗಳೊಳಗೆ ವರದಿ ನೀಡುವಂತೆ ಸೂಚಿಸಿತ್ತು.
ನ್ಯಾಯಮೂರ್ತಿ ಕುನ್ಹಾ ನೇತೃತ್ವದ ಆಯೋಗ ತನ್ನ ತನಿಖೆಯನ್ನು ಸಮಯಕ್ಕೆ ಒಳಗಾಗಿ ಪೂರ್ಣಗೊಳಿಸಿ, ಎರಡು ಸಂಪುಟಗಳಲ್ಲಿ ವರದಿಯನ್ನು ಮುಖ್ಯಮಂತ್ರಿ ಕಚೇರಿಗೆ ಮುಚ್ಚಿದ ಲಕೋಟೆಯಲ್ಲಿ ಹಸ್ತಾಂತರಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ತನಿಖಾ ಆಯೋಗವು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಜುಲೈ 17ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ವರದಿಯನ್ನು ಮಂಡಿಸಲಾಗುವುದು,” ಎಂದು ತಿಳಿಸಿದರು.