ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ರೂ.10,000 ಗಳ ಗೌರವಧನ ನೀಡಬೇಕು, ಬಜೆಟ್‌ನಲ್ಲಿ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ನೀಡಿದಂತೆ ತಮಗೂ ರೂ.1000 ಹೆಚ್ಚಳದ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮುಂದುವರಿಸಿದರು. ಆಗಸ್ಟ್ 12ರಿಂದ ಆಗಸ್ಟ್14 ರವರೆಗೆ ಮೂರು ದಿನಗಳ ಕಾಲ ರಾಜ್ಯವ್ಯಾಪಿ ಜಿಲ್ಲಾ ಮಟ್ಟದಲ್ಲಿ ಅಹೋರಾತ್ರಿ ಧರಣಿ ಕೈಗೊಂಡಿರುವ ಆಶಾ ಕಾರ್ಯಕರ್ತೆಯರು, ಹೋರಾಟದ ಎರಡನೇ ದಿನದಂದೂ ಮಳೆಯನ್ನೂ ಲೆಕ್ಕಿಸದೇ ಪ್ರತಿಭಟನೆ ನಡೆಸಿದರು.
ಬೆಂಗಳೂರು ಮಾತ್ರವಲ್ಲದೆ ವಿವಿಧ ಜಿಲ್ಲಾ ಕೇಂದ್ರಗಳಲ್ಲೂ ಆಶಾ ಕಾರ್ಯಕರ್ತೆಯರು ಹೋರಾಟ ನಡೆಸಿದರು.
ಇದೇ ವೇಳೆ, ‘ತಾವು ನುಡಿದಂತೆ ನಡೆಯಿರಿ, ನಮ್ಮ ಬೇಡಿಕೆಗಳನ್ನು ಈಡೇರಿಸಿ’ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಹಕ್ಕೊತ್ತಾಯಗಳು:
-
ಸಿಎಂ ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ ರೂ.10 ಸಾವಿರ ಗ್ಯಾರಂಟಿಯನ್ನು ಏಪ್ರಿಲ್ ನಿಂದಲೇ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು
-
ಮಾರ್ಚ್ ನಲ್ಲಿ ಮಂಡಿಸಿರುವ ರಾಜ್ಯ ಬಜೆಟ್‌ನಲ್ಲಿ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ರೂ. 1000 ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಹೆಚ್ಚಳ ಮಾಡಬೇಕು.
-
ತರ್ಕಬದ್ದಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು ಕೈಬಿಡಿ. ಈ ಹೆಸರಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು.
-
ಅವೈಜ್ಞಾನಿಕ ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕು.
-
ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು.
-
ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು.
-
ನಗರ ಆಶಾಗಳಿಗೆ ರೂ.2000 ಗೌರವಧನ ಹೆಚ್ಚಿಸಬೇಕು.
- 2025 ಜೂನ್-ಜುಲೈನಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು