ಬೆಂಗಳೂರು: ಖಾಸಗಿ ವಲಯದ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ಕ್ರಮಕ್ಕೆ ಉದ್ಯಮಿಗಳ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮಸೂದೆ ಮಂಡಿಸುವ ಪ್ರಕ್ರಿಯೆಗೆ ತಾತ್ಕಾಲಿಕ ಬ್ರೇಕ್ ಹಾಕಿರುವ ಸರ್ಕಾರ ಈ ಬಗ್ಗೆ ಪರಾಮರ್ಶೆ ನಡೆಸಿ ಬಳಿಕ ಜಾರಿಗೆ ಮುಂದಾಗಿದೆ.
ಕಳೆದ ಸಂಪುಟ ಸಭೆಯಲ್ಲಿ ನಿರ್ದಾರ ಕೈಗೊಂಡು ಇನ್ನೇನು ಅಧಿವೇಶನದಲ್ಲಿ ಮಸೂದೆ ಮಂಡಿಸಲು ಬಾಕಿ ಇರುವಾಗಲೇ ಕನ್ನಡಿಗರಿಗೆ ಮೀಸಲಾತಿ ನೀಡುವ ವಿಚಾರಕ್ಕೆ ಉದ್ಯಮಿಗಳಿಂದ ಆಕ್ಷೇಪ ವ್ಯಕ್ತವಾಗಿದೆ. ಇಂತಹ ಸಂದರ್ಭದಲ್ಲಿ ತರಾತುರಿಯಲ್ಲಿ ವಿದೇಯಕ ಜಾರಿಯಾದರೆ ಕಂಪನಿಗಳು ಕರ್ನಾಟಕವನ್ನು ತೊರೆಯುವ ಸಾಧ್ಯತೆಗಳಿವೆ. ಈ ಬಗ್ಗೆ ಆತಂಕಗೊಂಡ ಸರ್ಕಾರ ಈ ಮಸೂದೆಗೆ ತಾತ್ಕಾಲಿಕ ಬ್ರೇಕ್ ಹಾಕಿದೆ.
ಈ ಮಸೂದೆ ಬಗ್ಗೆ ಮತ್ತೊಮ್ಮೆ ಪರಾಮರ್ಶೆ ಅಗತ್ಯವಿರುವುದರಿಂದ ಸಂಪುಟ ಉಪಸಮಿತಿ ಮೂಲಕ ಚರ್ಚಿಸಿ ಕ್ರಮ ಕೈಗೊಳ್ಳುವ ಬಗ್ಗೆ ಸಿಎಂ ತೀರ್ಮಾನಿಸಿದ್ದಾರೆ. ಈ ಸಂಬಂದ ಸೋಮವಾರ ಸಂಪುಟ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
ಸೋಮವಾರದ ಸಂಪುಟ ಸಭೆಯಲ್ಲಿ ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್, ಎಚ್.ಕೆ. ಪಾಟೀಲ್, ಕೃಷ್ಣ ಬೈರೇಗೌಡ ಹಾಗೂ ಶಿವರಾಜ್ ತಂಗಡಗಿ ಅವರನ್ನೊಳಗೊಂಡ ಸಂಪುಟ ಉಪಸಮಿತಿ ರಚಿಸುವ ಸಾಧ್ಯತೆಗಳಿವೆ. ಈ ಸಂಪುಟ ಉಪಸಮಿತಿಯ ವರದಿ ಆಧರಿಸಿ ಮಸೂದೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಲಹೆಯನ್ನು ಸಿಎಂ ನೀಡಿದ್ದಾರೆ ಎನ್ನಲಾಗಿದೆ. .