ಬೆಂಗಳೂರು: ರಾಜ್ಯದಲ್ಲಿ ಮಳೆ ತಗ್ಗಿದರೂ ಅವಘಡಗಳು ಕಡಿಮೆಯಾಗಿಲ್ಲ. ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವೆಡೆ ಪ್ರವಾಹ ಪರಿಸ್ಥಿತಿ ಇನ್ನೂ ಇದೆ. ಅಷ್ಟೇ ಅಲ್ಲ, ರಾಜ್ಯದಲ್ಲಿ ಮಳೆ ಸಂಬಂಧಿತ ಘಟನೆಗಳು ಹಾಗೂ ಮಳೆ ಸಂದರ್ಭದ ಅವಘಡಗಳಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿದ್ದು ನದಿ ತೀರದ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಪ್ರವಾಹದ ಸ್ಥಿತಿ ಇದೆ. ಹಲವು ನಿರಂತರ ಮಳೆಯಿಂದಾಗಿ ಭಾರೀ ಪ್ರಮಾಣದಲ್ಲಿ ಮಳೆ ಹಾನಿ ಸಂಭವಿಸಿದೆ. ರಾಜ್ಯದಲ್ಲಿ ಒಂದು ಅಂದಾಜಿನ ಪ್ರಕಾರ ಸುಮಾರು 60 ಸಾವಿರ ಎಕರೆಯಲ್ಲಿನ ಬೆಳೆ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಸುಮಾರು 280 ಗ್ರಾಮಗಳಲ್ಲಿ ಭಾರೀ ಹಾನಿ ಸಂಭವಿಸಿದ್ದು, 2500ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿವೆ. 130ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಹಾಳಾಗಿವೆ ಎಂದು ಹೇಳಲಾಗುತ್ತಿದೆ. ರಾಜ್ಯದ ವಿವಿಧೆಡೆ, 3500ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಹಾನಿಗೊಳಗಾಗಿವೆ ಎಂದು ಮಾಹಿತಿ ಕಳೆಹಾಕಲಾಗಿದೆ. ನೂರಕ್ಕೂ ಹೆಚ್ಚು ಸೇತುವೆಗಳು, 200ಕ್ಕೂ ಶಾಲಾ ಕಟ್ಟಡಗಳು ಹಾನಿಗೊಳಗಾಗಿವೆ.
ಈ ನಡುವೆ, ಸಂಪೂರ್ಣವಾಗಿ ಮನೆ ಹಾನಿಯಾದ ಸಂತ್ರಸ್ತರಿಗೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಸಂಪೂರ್ಣವಾಗಿ ಮನೆಗಳು ಹಾನಿಗೊಂಡಿದ್ದರೆ ಅಂತಹಾ ಕುಟುಂಬಗಳಿಗೆ ತಕ್ಷಣದ ಪರಿಹಾರವಾಗಿ 1 ಲಕ್ಷ ರೂಪಾಯಿ ಬಿಡುಗಡೆ ಮಾಡಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವಾಲಯದ ಮೂಲಗಳು ತಿಳಿಸಿವೆ.