ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಭಾರಿಸುವ ಮೂಲಕ ಹೊಸ ಯುಗ ಆರಂಭವಾಗಿದೆ. ಈ ಗೆಲುವು ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತವರು ರಾಜ್ಯದ ಉಡುಗೊರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಜಿ.ಎ.ಬಾವಾ ಬಣ್ಣಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಾಯಕತ್ವಕ್ಕೆ ಜಿ.ಎ.ಬಾವಾ ಅಭಿನಂದನೆ ಸಲ್ಲಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಜನಮತ ಬಂದಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷರೂ ಆದ ಜಿ.ಎ.ಬಾವಾ, ಹಿಂದೆ ಚುನಾವಣೆಯಲ್ಲಿ ಗೆದ್ದ ಶಾಸಕರನ್ನು ಆಪರೇಷನ್ ಕಮಲ ಮೂಲಕ ಹೈಜಾಕ್ ಮಾಡಿ ವಾಮಮಾರ್ಗದ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿಯನ್ನು ರಾಜ್ಯದ ಜನತೆ ಈ ಬಾರಿ ತಿರಸ್ಜರಿಸಿದ್ದಾರೆ. ಅಷ್ಟೇ ಅಲ್ಲ, ಈ ಬಾರಿ ಸರಳ ಬಹುಮತಕ್ಕಿಂತ ಬಹಳಷ್ಟು ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಿಸುವ ಮೂಲಕ ಜನತೆ ಈ ರಾಜ್ಯದಲ್ಲಿ ಮತ್ತೊಮ್ಮೆ ಆಪರೇಷನ್ ಕಮಲಕ್ಕೆ ಅವಕಾಶ ನೀಡದಿರುವುದು ಉತ್ತಮ ಬೆಳವಣಿಗೆ ಎಂದರು.
ಮಂಗಳೂರು ಕ್ಷೇತ್ರದಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಅವರ ಗೆಲುವಿನ ಬಗ್ಗೆ ಸಂತಸ ಹಂಚಿಕೊಂಡ ಜಿ.ಎ.ಬಾವಾ, ಉಳ್ಳಾಲ ಸುತ್ತಮುತ್ತ ಮುಸ್ಲಿಂ ಮತಗಳನ್ನು ವಿಭಜಿಸುವ ಪ್ರಯತ್ನ ಬಿಜೆಪಿ ಬೆಂಬಲಿಗರಿಂದ ನಡೆದಿತ್ತು. ಆದರೆ ಆ ಕಾರ್ಯ ಸಫಲವಾಗಿಲ್ಲ. ಜನಾನುರಾಗಿ ನಾಯಕರಾಗಿರುವ ಯು.ಟಿ.ಖಾದರ್ ಅವರೊಂದಿಗೆ ಇಡೀ ಕ್ಷೇತ್ರದ ಜನ ಇದ್ದಾರೆ ಎಂಬುದು ಈ ಫಲಿತಾಂಶದಿಂದ ಗೊತ್ತಾಗಿದೆ ಎಂದು ವಿಶ್ಲೇಷಣೆ ಮಾಡಿದ್ದಾರೆ.
ಇನ್ನು ಆಪರೇಶನ್ ಅಸಾಧ್ಯ!
ರಾಜ್ಯದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ಇಲ್ಲ ಎಂಬುದನ್ನು ಜನರು ಸ್ಪಷ್ಟವಾಗಿ ತೋರಿಸಿದ್ದಾರೆ ಎಂದ ಅವರು, ಕಾಂಗ್ರೆಸ್ ಪಕ್ಷದ ಸರ್ಕಾರವು ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರ ಮಾರ್ಗದರ್ಶನದಲ್ಲಿ ಜನರ ನಿರೀಕ್ಷೆಗಳಿಗೆ ತಕ್ಕಂತೆ ಆಡಳಿತ ನಡೆಸಲಿದೆ. ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಿದೆ ಎಂದು ಭರವಸೆ ನೀಡಿದರು.
ಈ ಬಾರಿಯ ಫಲಿತಾಂಶವನ್ನು ಗಮನಿಸಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲೂ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದರಲ್ಲಿ ಸಂಶಯವಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.