ಬೆಂಗಳೂರು: ಗುತ್ತಿಗೆದಾರರಿಂದ ಪರ್ಸಂಟೇಜ್ ಕಮೀಷನ್ ಪಡೆಯಲಾಗುತ್ತದೆ ಎಂಬ ಸರ್ಕಾರದ ವಿರುದ್ದದ ಆರೋಪ ಕುರಿತಂತೆ ಮಾಜಿ ಸಿಎಂ ಕುಮಾರಸ್ವಾಮಿ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಕಮೀಷನ್ ಬಗ್ಗೆ ಆರೋಪಿಸಿ ಪ್ರಧಾನಿಗೆ ಪತ್ರ ಬರೆದಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರನ್ನು ಮಾಹಿತಿ ಬಹಿರಂಗಪಡಿಸದಂತೆ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ತಡೆಯುವ ಪ್ರಯತ್ನ ಮಾಡಿದ್ದರು ಎಂಬ ರಹಸ್ಯವನ್ನು ಕುಮಾರಸ್ವಾಮಿ ಬಹಿರಂಗಪಡಿಸಿದ್ದಾರೆ.
ತುಮಕೂರಿನಲ್ಲಿ ನಡೆದಿರುವ ಬಾಣಂತಿ ಹಾಗೂ ಶಿಶುಗಳ ಸಾವಿನ ವಿಚಾರದಲ್ಲಿ ಆರೋಗ್ಯ ಸಚಿವರನ್ನು ಕುಮಾರಸ್ವಾಮಿ ತೀವ್ರ ತರಾಟಗೆ ತೆಗೆ್ಉಕೊಂಡಿದ್ದಲ್ಲದೆ ಸಚಿವರ ರಾಜೀನಾಮೆಗೂ ಆಗ್ರಹಿಸಿದ್ದರು. ಇದರಿಂದ ಕುಪಿತರಾದ ಸುಧಾಕರ್ ಅವರು ಹೆಚ್ಡಿಕೆ ಸಿಎಂ ಆಗಿದ್ದಾಗ ನಡೆದ ಕಹಿ ಘಟನೆಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದರು. ಇದರಿಂದ ಕೆಂಡಾಮಂಡಲರಾಗಿರುವ ಹೆಚ್ಡಿಕೆ, ಇಂದು ಮತ್ತೆ ಟ್ವೀಟ್ ಮಾಡಿ ಬಿಜೆಪಿ ಸರ್ಕಾರ ಹಾಗೂ ಸಚಿವ ಸುಧಾಕರ್ ಅವರ ಅವಾಂತರಗಳನ್ನು ಬಯಲು ಮಾಡಿದ್ದಾರೆ. ‘ನಿಮ್ಮ ಪರ್ಸಂಟೇಜ್ ವ್ಯವಹಾರದ ಬಗ್ಗೆ ಮಾತನಾಡಿದ ಗುತ್ತಿಗೆದಾರರಾದ ಕೆಂಪಣ್ಣ ಅವರು ಚಿಕ್ಕಬಳ್ಳಾಪುರದ ಕಾರ್ಯಕ್ರಮ ಒಂದಕ್ಕೆ ಬರಬೇಕಿತ್ತು. ಅವರನ್ನು ಬರದಂತೆ ತಡೆಯಲು ಏನೆಲ್ಲಾ ಹೈಡ್ರಾಮಾ ನಡೆಸಿದರಿ, ಯಾರ ಕಾಲು ಹಿಡಿದಿರಿ ಎನ್ನುವ ಮಾಹಿತಿ ನನಗೂ ಇದೆ ಎಂದು ಎಂಬ ಹೆಚ್ಡಿಕೆ ಹೇಳಿಕೆ ಪರ್ಸಂಟೇಜ್ ಪ್ರಕರಣದ ರಹಸ್ಯದತ್ತ ಬೊಟ್ಟುಮಾಡಿದೆ.
ಏನಿದು ಹೆಚ್ಡಿಕೆ ಟ್ವೀಟ್..?
ಸುಧಾಕರ್ ವಿರುದ್ದ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್ ದುರಂತದಿಂದ 36 ಜನರ ಸಾವಿಗೆ ಕಾರಣರಾಗಿದ್ದು ಯಾರು? ನಿಮ್ಮ ವೈಫಲ್ಯವಲ್ಲವೇ? ರಾಜ್ಯದ ಉದ್ದಗಲಕ್ಕೂ ನಡೆದ ಸಾವುಗಳ ರಣಕೇಕೆ ನಿಮ್ಮ ಕಿವಿಗೆ ಇಂಪಾಗಿತ್ತಾ? ಕೋವಿಡ್ ಹೆಸರಿನಲ್ಲಿ ನಡೆದ ಕೊಳ್ಳೆ ಬಗ್ಗೆ ನನಗಿಂತ ನಿಮ್ಮ ಪಕ್ಷದವರಿಗೇ ಚೆನ್ನಾಗಿ ಗೊತ್ತು ಎಂದಿದ್ದಾರೆ.
ಕಾಸಿಗಾಗಿ ಹುದ್ದೆ; ಇದು ನಿಮ್ಮ ಸುಲಿಗೆ ನೀತಿ. ವೈದ್ಯರು, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಬಿಕರಿಗಿಟ್ಟಿದ್ದೀರಿ. ಅವರ ಒಂದು ವರ್ಷದ ವೇತನ ನೀವು ನಿಗದಿ ಮಾಡಿರುವ ದರ. ಬೆಕ್ಕು ಕಣ್ಮುಚ್ಚಿ ಹಾಲು ಕುಡಿಯುತ್ತಿದೆ ಎಂದರೆ ಲೋಕಕ್ಕೆ ಕಾಣುವುದಿಲ್ಲವೇ? ಕಳ್ಳಬೆಕ್ಕಿನ ಆಟ ಕಾಲದುದ್ದಕ್ಕೂ ನಡೆಯುವುದಿಲ್ಲ, ನೆನಪಿರಲಿ ಎಂದು ಸುಧಾಕರ್ ವಿರುದ್ದ ತೀಕ್ಷ್ಣ ಪದಗಳಿಂದ ಆಕ್ರೋಶ ಹೊರಹಾಕಿರುವ ಕುಮಾರಸ್ವಾಮಿ, ನಿಮ್ಮ ಪರ್ಸಂಟೇಜ್ ವ್ಯವಹಾರದ ಬಗ್ಗೆ ಮಾತನಾಡಿದ ಗುತ್ತಿಗೆದಾರರಾದ ಕೆಂಪಣ್ಣ ಅವರು ಚಿಕ್ಕಬಳ್ಳಾಪುರದ ಕಾರ್ಯಕ್ರಮ ಒಂದಕ್ಕೆ ಬರಬೇಕಿತ್ತು. ಅವರನ್ನು ಬರದಂತೆ ತಡೆಯಲು ಏನೆಲ್ಲಾ ಹೈಡ್ರಾಮಾ ನಡೆಸಿದರಿ, ಯಾರ ಕಾಲು ಹಿಡಿದಿರಿ ಎನ್ನುವ ಮಾಹಿತಿ ನನಗೂ ಇದೆ. ʼಗಾಜಿನ ಮನೆಯಲ್ಲಿ ಕೂತು ಗೋಲಿಯಾಟ ಆಡುವುದು ಕ್ಷೇಮವಲ್ಲʼ ಎಂದಿದ್ದಾರೆ.






















































