ಮಂಗಳೂರು: ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿಷ್ಟುರ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಿಯಮಾವಳಿಗಳನ್ನು ಕಠಿಣಗೊಳಿಸಿದೆ. ಅದಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾತ್ರೆ, ಸಮಾರಂಭಗಳಿಗೆ ಅಂಕುಶ ಹಾಕುವ ಕ್ರಮಕ್ಕೆ ಜಿಲ್ಲಾಧಿಕಾರಿಗಳು ಮುಂದಾಗಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶ ಸಾರ್ವಜನಿಕವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬಹುತೇಕ ದೇಗುಲಗಳ ಜಾತ್ರೆಯ ಪ್ರಕ್ರಿಯೆಗಳು ಆರಂಭಗೊಂಡಿವೆ. ನೇಮೋತ್ಸವ ಹಾಗೂ ಇನ್ನಿತರ ಧಾರ್ಮಿಕ ಕೈಂಕರ್ಯಗಳಿಗೂ ದಿನಾಂಕ ನಿಗದಿಯಾಗಿವೆ. ಹೀಗಿರುವಾಗ ಕಾರ್ಯಕ್ರಮಗಳನ್ನು ನಿರ್ಬಂಧಿಸುವಂತಹಾ ಪ್ರಯತ್ನ ಸರಿಯಲ್ಲ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕೂಡಾ ಜಿಲ್ಲಾಧಿಕಾರಿಗಳ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದೇಶಗಳನ್ಬು ಪುನರ್ ಪರಿಶೀಲಿಸಬೇಕೆಂದು ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಕುರಿತಂತೆ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಯಕ್ಷಗಾನ, ಕೋಲ, ನೇಮು ಪೂಜೆ, ಪುನಸ್ಕಾರಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿ ನಡೆಯಬಹುದಾಗಿದೆ. ಹಾಗಾಗಿ ಆದೇಶವನ್ನು ಪುನರ್ ಪರಿಶೀಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.