ಬೆಂಗಳೂರು, ಆಗಸ್ಟ್ 18: ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿದ್ದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಏಳು ದಿನಗಳೊಳಗೆ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷರಾಗಿ ಮರುನೇಮಕ ಮಾಡುವಂತೆ ನ್ಯಾಯಾಲಯ ಸೂಚಿಸಿದೆ.

ಜುಲೈ 10ರಂದು ರಾಜ್ಯಪಾಲರು ಶಿವಶಂಕರಪ್ಪ ಅವರನ್ನು ಅಮಾನತುಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.
ಶಿವಶಂಕರಪ್ಪ ಅವರನ್ನು ಅಮಾನತುಗೊಳಿಸುವಂತೆ ರಾಜ್ಯ ಸಚಿವ ಸಂಪುಟ ಯಾವುದೇ ಸಲಹೆ ಅಥವಾ ಶಿಫಾರಸು ಮಾಡಿರಲಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಕೋರ್ಟ್ ಹೇಳಿದೆ. ಹೀಗಾಗಿ ಜುಲೈ 10ರಂದು ಹೊರಡಿಸಿದ್ದ ಅಮಾನತು ಆದೇಶವನ್ನು ರದ್ದುಪಡಿಸಲಾಗಿದೆ.
ಶಿವಶಂಕರಪ್ಪ ಅವರ ಪುತ್ರಿಯರ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ನ್ಯಾಯಾಲಯ ಸೂಚಿಸಿದೆ.
ಕೆಪಿಎಸ್‌ಸಿ ಅಧ್ಯಕ್ಷರ ವಿರುದ್ಧ ಕೇಳಿಬಂದಿರುವ ಆರೋಪಗಳ ಸತ್ಯಾಸತ್ಯತೆ ಬಗ್ಗೆ ಕೋರ್ಟ್ ಯಾವುದೇ ತೀರ್ಪು ನೀಡಿಲ್ಲ. ಅಮಾನತು ಆದೇಶದ ಕಾನೂನುಬದ್ಧತೆಯನ್ನಷ್ಟೇ ಪರಿಶೀಲಿಸಲಾಗಿದೆ ಎಂದು ಪೀಠ ಸ್ಪಷ್ಟಪಡಿಸಿದೆ.
ಶಿವಶಂಕರಪ್ಪ ಪರ ಹಿರಿಯ ವಕೀಲ ಅರುಣ್ ಶ್ಯಾಮ್, ಸಚಿವ ಸಂಪುಟದ ಘಟನೋತ್ತರ ಅನುಮೋದನೆ ಕಾನೂನುಬಾಹಿರ ಎಂದು ವಾದಿಸಿದ್ದರು. ಹೈಕೋರ್ಟ್ ತೀರ್ಪಿನಿಂದ ಶಿವಶಂಕರಪ್ಪ ಅವರಿಗೆ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಮರಳಲು ದಾರಿ ಸಿಕ್ಕಂತಾಗಿದೆ.






































































