ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಮುಷ್ಕರವು ರಾಜ್ಯ ಸರ್ಕಾರಕ್ಕೆ ಸವಾಲೆಂಬಂತಾಗಿದೆ.
ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಹಲವು ದಿನಗಳಿಂದ ಮುಷ್ಕರ ಕೈಗೊಂಡಿದ್ದಾರೆ. ಈ ಮುಷ್ಕರದಿಂದಾಗಿ ರಾಜ್ಯದಲ್ಲಿ ಸಾರಿಗೆ ಸಂಸ್ಥೆಯ ಬಸ್ಸುಗಳ ಸಂಚಾರ ಸ್ಥಗಿತಗೊಂಡು ಸಾರ್ವಜನಿಕರು ಪರಡಾಡುವಂತಾಗಿದೆ.
ಈ ಹಿನ್ನೆಲೆಯಲ್ಲಿ ಸಮಸ್ಯೆಯನ್ನು ಬಗೆಹರಿಸುವ ಸಂಬಂಧ ಸಂಪುಟ ಸಹೋದ್ಯೋಗಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ನಡೆಸಿದ ಸರಣಿ ಸಭೆ ಕುತೂಹಲದ ಕೇಂದ್ರಬಿಂದುವಾಯಿತು.
ಮುಖ್ಯಮಂತ್ರಿಯವರು ತಮ್ಮ ನಿವಾಸದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಸಿದರು. ಸಾರಿಗೆ ಸಿಬ್ಬಂದಿಯ ಮುಷ್ಕರಕ್ಕೆ ಸಂಬಂಧಿಸಿದಂತೆ ಸಚಿವರೊಂದಿಗೆ ನಡೆಸಿದ ಈ ಸಭೆಯಲ್ಲಿ ಮಾರ್ಗೋಪಾಯಗಳ ಕುರಿತು ಚರ್ಚಿಸಿದರು.