ಬೆಂಗಳೂರು : ಸದ್ಯಕ್ಕೆ ಜೂನ್ 7 ರ ವರೆಗೆ ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ಡೌನ್ ವಿಸ್ತರಣೆ ಮಾಡುವ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂತ್ರಿಮಂಡಲದ ಸದಸ್ಯರೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಇಲಾಖೆಯ ಹೊಸ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಚಿವರ ಸಭೆ ನಡೆಸಲು ನಿರ್ಧರಿಸಿದ್ದಾರೆ ಎಂದರು.
ಸದ್ಯಕ್ಕೆ ಜೂನ್ 7ರವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಾದ ಲಾಕ್ಡೌನ್ ಜಾರಿಯಲ್ಲಿ ಇರಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ ಕೇಂದ್ರ ಗೃಹ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಜೂನ್ 30ರವರೆಗೆ ಬಿಗಿ ಕ್ರಮಗಳು ಇರಬೇಕು ಅಂತ ಹೇಳಿದೆ. ಇದನ್ನು ಯಾವ ರೀತಿ ಜಾರಿ ಮಾಡಬೇಕು ಎಂಬುದರ ಕುರಿತು ಮುಖ್ಯಮಂತ್ರಿಗಳು ಸಚಿವರ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಬೊಮ್ಮಾಯಿ ವಿವರಿಸಿದರು.
ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಇನ್ನೂ ಕಡಿಮೆಯಾಗಿಲ್ಲ. ಅದು ಶೇಕಡ ೧೦ ಕ್ಕಿಂತ ಕಡಿಮೆ ಆಗಬೇಕಾಗಿದೆ. ಗ್ರಾಮೀಣ ಪ್ರದೇಶದಲ್ಲಿಯೂ ಕೋವಿಡ್ ಪ್ರಮಾಣ ಮತ್ತು ಸಾವುಗಳ ಸಂಖ್ಯೆ ನಿಯಂತ್ರಣಕ್ಕೆ ಬರಬೇಕು. ಆಗ ಮಾತ್ರ ಕೋವಿಡ್ ಹತೋಟಿಗೆ ಬರಲು ಸಾಧ್ಯ. ಆಗ ನಮ್ಮ ರಾಜ್ಯದಲ್ಲಿರುವ ಆಸ್ಪತ್ರೆಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.