ಮಂಗಳೂರು: ಕೋವಿಡ್ ಮೂರನೇ ಅಲೆ ಆತಂಕದಲ್ಲಿರುವ ರಾಜ್ಯದ ಜನರು ಇದೀಗ ಮತ್ತೊಮ್ಮೆ ಲಾಕ್‌ಡೌನ್ ಜಾರಿಯ ಭೀತಿಯಲ್ಲಿ ಸಿಲುಕಿದ್ದಾರೆ. ಆಗಸ್ಟ್ 15ರ ಬಳಿಕ ಲಾಕ್‌ಡೌನ್ ಕಠಿಣ ನಿಯಮ ಜಾರಿಯ ಆತಂಕದ ಮಾಹಿತಿ ಹರಿದಾಡುತ್ತಿದೆ.
ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಆ.15ರಿಂದ ಮತ್ತೆ ಲಾಕ್‌ಡೌನ್ ಜಾರಿಯ ಪರಿಸ್ಥಿತಿ ಬಂದಿಲ್ಲ ಎಂದಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆಗಿನ ಸಂವಾದದಲ್ಲಿ ಮಾತನಾಡಿದ ಅವರು, ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿರುವುದು ನಿಜ. ಅತ್ಯಂತ ಸುಸಜ್ಜಿತ ಆಧುನಿಕ ಆಸ್ಪತ್ರೆಗಳು, ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿರುವ ಕಾಸರಗೋಡು ಸೇರಿದಂತೆ ಕೇರಳ ಗಡಿಗೆ ದಕ್ಷಿಣ ಕನ್ನಡ ಜಿಲ್ಲೆ ಹೊಂದಿಕೊಂಡಿರುವುದರಿಂದ ಸಹಜವಾಗಿ ಪಾಸಿಟಿವಿಟಿ ದರದಲ್ಲಿ ಹೆಚ್ಚಳ ಕಂಡುಬರುತ್ತಿದೆ ಎಂದರು.
ಆದರೆ ಸದ್ಯದ ಪರಿಸ್ಥಿತಿಯಲ್ಲಿ ಮತ್ತೆ ಲಾಕ್‌ಡೌನ್ ಮಾಡುವಂತಹ ಪರಿಸ್ಥಿತಿ ಇಲ್ಲ. ಪರಿಸ್ಥಿತಿಯನ್ನು ಅವಲೋಕಿಸಿ, ರಾಜ್ಯ ಸರಕಾರದ ನಿರ್ದೇಶನದ ಮೇರೆಗೆ ಕ್ರಮ ವಹಿಸಲಾಗುತ್ತದೆ ಎಂದ ಅವರು, ಪ್ರಸಕ್ತ, ಅಗಸ್ಟ್ 15ರ ಬಳಿಕ ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್ ಮಾಡಲಾಗುತ್ತದೆ ಎಂಬುದು ಊಹಾಪೋಹ ಎಂದರು.