ಮಂಗಳೂರು: ರಾಜ್ಯದ ವಿವಿಧೆಡೆ ಇಂದು ಮತ್ತೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದ್ದಾರೆ. ರಾಜ್ಯದ 50ಕ್ಕೂ ಹೆಚ್ಚು ಕಡೆ ಕಾರ್ಯಾಚರಣೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು ನಗರದ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಂಗಳೂರಿನಲ್ಲೂ ಲೋಕಾಯುಕ್ತ ಕಾರ್ಯಾಚರಣೆ ನಡೆದಿದೆ.
ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ತಂಡ ಅಧಿಕಾರಿಗಳ ನಿವಾಸಗಳಿಗೆ ದಾಳಿ ನಡೆಸಿದೆ. ಮಂಗಳೂರಿನಲ್ಲಿ ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಕೈಗೊಂಡಿದ್ದಾರೆ. ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಪ್ರಕಾಶ್, ಭದ್ರಾವತಿ ಸಮೀಪದ ಅಂತರಗಂಗೆಯ ಗ್ರಾಮ ಪಂಚಾಯ್ತಿ ಅಧ್ಯಕ್ಷ ನಾಗೇಶ್ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ತಂಡಗಳು ದಾಖಲೆಗಳನ್ನು ಪರಿಶೀಲನೆ ನಡೆಸಿವೆ.