ನವದೆಹಲಿ: ಪ್ರಸ್ತಾವಿತ ಕ್ಷೇತ್ರ ವಿಂಗಡಣಾ ಮಸೂದೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತಾಸಕ್ತಿ ರಕ್ಷಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಸಂವಿಧಾನದ 330ನೇ ವಿಧಿ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಿದ್ದರೂ, ಲೋಕಸಭೆಯಲ್ಲಿ ಅವರ ಮೀಸಲು ಸ್ಥಾನಗಳನ್ನು ಹೆಚ್ಚಿಸಲು ಮಸೂದೆಯಲ್ಲಿ ಅವಕಾಶವಿಲ್ಲ ಎಂದು ಟೀಕಿಸಿದ್ದಾರೆ.

ಕ್ಷೇತ್ರ ವಿಂಗಡಣೆ ಇತ್ತೀಚಿನ ಜನಗಣತಿ ದತ್ತಾಂಶವನ್ನು ಆಧರಿಸಿರಬೇಕು. ಇದರಿಂದ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲು ಸ್ಥಾನಗಳನ್ನು ಹೆಚ್ಚಿಸಲು ಸಾಧ್ಯವಾಗಲಿದೆ ಎಂದು ಪ್ರತಿಪಾದಿಸಿದ್ದಾರೆ.
2026ರ ಜನಗಣತಿ ಕುರಿತು ಚರ್ಚೆಯೇ ನಡೆಯದಿರುವುದನ್ನು ಪ್ರಶ್ನಿಸಿರುವ ಖರ್ಗೆ, ಎಸ್ಸಿ, ಎಸ್ಟಿಗಳಿಗೆ ನ್ಯಾಯಯುತ ಪ್ರಾತಿನಿಧ್ಯ ಕಲ್ಪಿಸುವ ಬದಲು ಸರ್ಕಾರ ತನ್ನ ರಾಜಕೀಯ ಹಿತಾಸಕ್ತಿಗಾಗಿ ಕ್ಷೇತ್ರ ವಿಂಗಡಣೆ ಪ್ರಕ್ರಿಯೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.















































































