ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮೇಲೆ ದಾಳಿಗೆ ಯತ್ನಿಸಿದೆ. ಮಂಗಳೂರು ಹೊರವಲಯದ ಮೂಡುಶೆಡ್ಡೆಯಲ್ಲಿ ನಡೆದ ಈ ಘಟನೆಯು ಚುಣಾವಣೋತ್ತರ ಘರ್ಷಣೆಗೆ ಕಾರಣವಾಗಿದೆ.
ಬುಧವಾರ ಸಂಜೆ ಮತದಾನ ಅವಧಿ ಮುಗಿಯುತ್ತಿದ್ದಂತೆಯೇ ಮೂಡುಬಿದಿರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಕಾರು ಮೂಡುಶೆಡ್ಡೆ ಬಳಿ ಹಾದು ಹೋಗುತ್ತಿದ್ದಾಗ ಯುವಕರ ಗುಂಪು ಘೋಷಣೆ ಕೂಗಿದೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಗುಂಪು ಪ್ರತಿರೋಧ ಒಡ್ಡಿದೆ. ಆ ಸಂದರ್ಭದಲ್ಲಿ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಮಿಥುನ್ ರೈ ಅವರ ಕಾರನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಈ ಘಟನೆಯಲ್ಲಿ ಪೊಲೀಸರೂ ಗಾಯಗೊಂಡಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಹೆಚ್ಚುವರಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದ್ದಾರೆ.