ಹುಬ್ಬಳ್ಳಿ: ಗೃಹ ಸಚಿವ ಪರಮೇಶ್ವರ್ ಅವರಿಗೆ ತಮ್ಮ ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಬೇರೆ ಇಲಾಖೆಯನ್ನು ವಹಿಸಿಕೊಳ್ಳಲಿ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಇಬ್ಬರು ಯುವತಿಯರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯದಲ್ಲಿನ ಅಭದ್ರತಾ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದರು. ರಾಜ್ಯದಾದ್ಯಂತ ಮಾದಕ ವಸ್ತುಗಳ ಮಾರಾಟ ನಡೆಯುತ್ತಿದ್ದರೂ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದವರು ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಮತ್ತು ವಿಪರೀತ ಮಾದಕ ದ್ರವ್ಯ ದಂಧೆಯೇ ನೇಹಾ ಹಿರೇಮಠ ಮತ್ತು ಅಂಜಲಿ ಹತ್ಯೆಗೆ ಕಾರಣ ಎಂದು ಆರೋಪಿಸಿದ ಯತ್ನಾಳ್, ಗೃಹ ಸಚಿವ ಜಿ ಪರಮೇಶ್ವರ ಅವರ ಕಾರ್ಯವೈಖರಿ ಬಗ್ಗೆ ಕಿಡಿಕಾರಿದರು. ತಮ್ಮನ್ನು ರಕ್ಷಿಸಿಕೊಳ್ಳುವ ಸಲುವಾಗಿ ಹಾಗೂ ಸರ್ಕಾರದ ವೈಫಲ್ಯವನ್ನು ಮುಚ್ಚುವ ತರಾತುರಿಯಲ್ಲಿ ಪರಮೇಶ್ವರ್ ಅವರು ನಾಲ್ವರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ ಎಂದು ಆರೋಪಿಸಿದ ಯತ್ನಾಳ್, ಪರಮೇಶ್ವರ್ ಅವರಿಗೆ ಗೃಹ ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಬೇರೆ ಇಲಾಖೆಯನ್ನು ವಹಿಸಿಕೊಳ್ಳಲಿ ಎಂದು ತರಾಟೆಗೆ ತೆಗೆದುಕೊಂಡರು.