ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತುಳುನಾಡ ವೈಭವ ಗರಿಗೆದರಿದೆ. ಇತಿಹಾಸದಲ್ಲೇ ಮೊದಲೆಂಬಂತೆ ಬೆಂಗಳೂರಿನಲ್ಲಿ ಕಂಬಳ ಆಯೋಜಿತವಾಗಿದ್ದು, ಅರಮನೆ ಮೈದಾನದಲ್ಲಿ ಈ ಮಹಾ ವೈಭವಕ್ಕೆ ಚಾಲನೆ ಸಿಕ್ಕಿದೆ.
ಪುತ್ತೂರು ಶಾಸಕ ಅಶೋಕ್ ರೈ ಮುಂದಾಳುತ್ವದಲ್ಲಿ ಬೆಂಗಳೂರು ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ‘ನಮ್ಮ ಕಂಬಳ, ಬೆಂಗಳೂರು ಕಂಬಳ’ ಎಂಬ ಹೆಸರಿನಲ್ಲಿ ಕಂಬಳ ಆಯೋಜಿತವಾಗಿದ್ದು, ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಕಾರ್ಯಕ್ರಮಕ್ಕೆ ಮುನ್ನುಡಿ ಬರೆಯಲಾಯಿತು.
ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಬಳಿಕ ಕಂಬಳ ಕೆರೆಗೆ ಯುವರತ್ನ ಡಾ. ಪುನಿತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನಿತ್ ರಾಜ್ಕುಮಾರ್ ಅವರು ಇಂದು ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಸದಾನಂದ ಗೌಡ, ಶಾಸಕರಾದ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.