ದೆಹಲಿ: ರಾಷ್ಟ್ರೀಯ ಹೆದ್ದಾರಿ-234 ನಲ್ಲಿ ಚಿಕ್ಕಬಳ್ಳಾಪುರ-ಚಿಂತಾಮಣಿ ಬೈಪಾಸ್ ನಿರ್ಮಾಣ ಕುರಿತು ಸಚಿವ ಡಾ.ಕೆ.ಸುಧಾಕರ್ ಅವರು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಯೋಜನೆ ಕುರಿತ ಡಿಪಿಆರ್ ಅನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಲ್ಲಿಸಿದ್ದು, ಇದು ಚಿಕ್ಕಬಳ್ಳಾಪುರದ ಸಂಚಾರ ದಟ್ಟಣೆ ನಿವಾರಿಸಲಿದೆ. ಕೃಷಿ ಹಾಗೂ ಕೈಗಾರಿಕಾ ಸಂಬಂಧಿತ ಉತ್ಪನ್ನಗಳನ್ನು ಸಾಗಿಸಲು ಇದು ನೆರವಾಗಲಿದೆ. ಮುಖ್ಯವಾಗಿ ತರಕಾರಿ, ಹೂವು, ಹಣ್ಣು ಮೊದಲಾದ ಕೃಷಿ ಆಧಾರಿತ ಕೈಗಾರಿಕೆಗೆ ಇದು ಹೆಚ್ಚು ಅನುಕೂಲವಾಗಲಿದೆ. ಈ ಬೈಪಾಸ್, ಎನ್‍ಎಚ್-234 ನಲ್ಲಿ 395 ಕಿ.ಮೀ. ನಿಂದ ಆರಂಭವಾಗಿ 407 ಕಿ.ಮೀ.ಗೆ ಮುಕ್ತಾಯಗೊಳ್ಳಲಿದೆ. ಒಟ್ಟು 12.756 ಕಿ.ಮೀ. ಉದ್ದದ ರಸ್ತೆಯ ಈ ಯೋಜನೆ ಇದಾಗಿದೆ. ಚಿಂತಾಮಣಿ ಬೈಪಾಸ್ 428 ಕಿ.ಮೀ. ನಿಂದ ಆರಂಭವಾಗಿ 442 ಕಿ.ಮೀ.ಗೆ ಮುಕ್ತಾಯಗೊಳ್ಳಲಿದೆ. ಇದು ಒಟ್ಟು 14.370 ಕಿ.ಮೀ. ಉದ್ದದ ರಸ್ತೆಯ ಯೋಜನೆಯಾಗಿದೆ ಎಂದು ಸಚಿವರು ಮನವಿ ಪತ್ರದಲ್ಲಿ ವಿವರಿಸಿದ್ದಾರೆ. ಡಿಪಿಆರ್ ಅನ್ನು ಶೀಘ್ರ ಪರಿಗಣಿಸಿ ಅಗತ್ಯ ಕ್ರಮಗಳನ್ನು ವಹಿಸಬೇಕೆಂದು ಸಚಿವರು ಕೋರಿದ್ದಾರೆ.
ಶೀಘ್ರ ಕಾಮಗಾರಿಗೆ ಮನವಿ
ಎನ್‍ಎಚ್-234 ರಲ್ಲಿ ಗೌರಿಬಿದನೂರಿನಿಂದ ಚಿಕ್ಕಬಳ್ಳಾಪುರವರೆಗೆ ಸೇತುವೆ, ರಸ್ತೆ ಮೊದಲಾದ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಯನ್ನು 2015 ರ ಜುಲೈ ನಿಂದ ಆರಂಭಿಸಿದ್ದು, 2017 ರ ಮಧ್ಯಭಾಗಕ್ಕೆ ಮುಗಿಯಬೇಕಿತ್ತು. ಆದರೆ ದುರದೃಷ್ಟದಂತೆ 2018 ರಿಂದ ಕಾಮಗಾರಿ ಸ್ಥಗಿತಗೊಂಡಿದೆ. ಇದರಿಂದಾಗಿ ಜನಸಾಮಾನ್ಯರು, ಮುಖ್ಯವಾಗಿ ರೈತರು ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಕಷ್ಟಪಡುತ್ತಿದ್ದಾರೆ. 2021 ರ ಜೂನ್ ಗೆ ಕಾಮಗಾರಿ ಪೂರ್ಣಗೊಳ್ಳುವುದಾಗಿ ತಿಳಿಸಿದ್ದರೂ, ಸ್ಥಳದಲ್ಲಿ ಯಾವುದೇ ಕಾಮಗಾರಿ ಆರಂಭವಾಗಿಲ್ಲ. ಕೂಡಲೇ ಕಾಮಗಾರಿ ಆರಂಭಿಸಲು ಸೂಕ್ತ ಪರಿಶೀಲನೆ, ಸಭೆಗಳನ್ನು ನಡೆಸಬೇಕೆಂದು ಕೆಲ ತಜ್ಞರು ಹೇಳಿದ್ದಾರೆ. ಆದ್ದರಿಂದ ಇದಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ವಹಿಸಬೇಕೆಂದು ಸಚಿವ ಡಾ.ಕೆ.ಸುಧಾಕರ್ ಕೋರಿದ್ದಾರೆ.
ನಂದಿ ಬೆಟ್ಟ ರಸ್ತೆ ವಿಸ್ತರಣೆ
ನಂದಿ ಬೆಟ್ಟ ಜನಪ್ರಿಯ ಪ್ರವಾಸಿ ತಾಣವಾಗಿದ್ದು, ಪ್ರಮುಖ ಆತಿಥ್ಯ ಕ್ಷೇತ್ರವಾಗಿ ಬೆಳೆಯುತ್ತಿದೆ. ಆದರೆ ನಂದಿ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಿರಿದಾಗಿದೆ. ಆದ್ದರಿಂದ ಎನ್‍ಎಚ್-7 ಹಾಗೂ ನಂದಿ ಬೆಟ್ಟ ಸಂಪರ್ಕಿಸುವ ರಸ್ತೆಯನ್ನು ನಾಲ್ಕು ಪಥಗಳ ರಸ್ತೆಯಾಗಿ ವಿಸ್ತರಣೆ ಮಾಡುವಂತೆ ಸಚಿವ ಡಾ.ಕೆ.ಸುಧಾಕರ್ ಮನವಿ ಸಲ್ಲಿಸಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದ ವೇಳೆ, ಮೆಟ್ರೊ ಹಾಗೂ ಉಪನಗರ ರೈಲು ಯೋಜನೆಗಳ ಮಾರ್ಗಗಳನ್ನು ಚಿಕ್ಕಬಳ್ಳಾಪುರವರೆಗೆ ವಿಸ್ತರಣೆ ಮಾಡಬೇಕೆಂದು ಸಚಿವ ಡಾ.ಕೆ.ಸುಧಾಕರ್ ಕೋರಿದ್ದಾರೆ.