ಬೆಂಗಳೂರು : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಾರಿಗೊಳಿಸುತ್ತಿರುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ನೀಲನಕ್ಷೆ ರೂಪಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಪ್ರಸಕ್ತ ವರ್ಷದ ಕಾರ್ಯಕ್ರಮಗಳು ಮತ್ತು ಅನುದಾನದ ಪ್ರಸ್ತಾವನೆಗಳ ಬಗ್ಗೆ ಪರೀಶೀಲನೆ ನಡೆಸಿದ ಸಚಿವರು, ಗ್ರಾಮೀಣರು ಅದರಲ್ಲೂ ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕಿದೆ. ಅದಕ್ಕಾಗಿ ಪ್ರತಿಯೊಂದು ಕಾರ್ಯಕ್ರಮಗಳನ್ನು ಜನಸ್ನೇಹಿಯಾಗಿ ಮರು ವಿನ್ಯಾಸಗೊಳಿಸುವ ಅಗತ್ಯವಿದೆ ಎಂದು ಬುಧವಾರ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಸಾಂಕ್ರಾಮಿಕವಲ್ಲದ ರೋಗಗಳಿಂದ ಸಾವಿನ ಪ್ರಮಾಣ ಹೆಚ್ಚುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ರೋಗದ ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಕೆಲಸ ಆಗಬೇಕು. ಅದಕ್ಕಾಗಿ ತೃತೀಯ ಹಂತದಲ್ಲೇ ಇತರೆ ಚಿಕಿತ್ಸೆಗೆ ಆಗಮಿಸುವವರಿಗೆ ರಕ್ತ ಹಾಗೂ ಇತರೆ ಪರೀಕ್ಷೆಗಳ ಮೂಲಕ ರೋಗಗಳನ್ನು ಪತ್ತೆ ಹಚ್ಚಿ ಅದನ್ನು ದಾಖಲಿಸುವ ಕೆಲಸ ಆಗಬೇಕಿದೆ. ಅದಕ್ಕಾಗಿ ಕೆಲ ಕಾರ್ಯಕ್ರಮಗಳ ಮರು ವಿನ್ಯಾಸ ಮಾಡಿಕೊಳ್ಳುವ ಅಗತ್ಯವಿದೆ. ಕೇಂದ್ರವು ಪ್ರಸ್ತಾವನೆಗಳಿಗೆ ಅನುಮತಿ ನೀಡಿದ ಬಳಿಕ ಈ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ತಾಕೀತು ಮಾಡಿದರು.
ಸಾಂಕ್ರಾಮಿಕವಲ್ಲದ ರೋಗಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ಆಗಬೇಕಿದೆ. ಇದಕ್ಕಾಗಿ ಇಲಾಖೆಯ ಮಾಹಿತಿ ವಿಭಾಗವು ಹೆಚ್ಚು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕಿದೆ. ಅದಕ್ಕೆ ಬೇಕಿರುವ ಸಂಪನ್ಮೂಲಕ ಹಾಗೂ ಸಿಬ್ಬಂದಿಯನ್ನು ನಿಯೋಜನೆ ಮಾಡುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದರು.
ಜೀವಸಾರ್ಥಕತೆ ವಿಭಾಗವು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕಿದೆ. ಅಂಗಾಂಗ ದಾನ ಮತ್ತು ಚಿಕಿತ್ಸೆಯು ಎಲ್ಲ ಬಡವರಿಗೂ ಕೈಗೆಟಕುವ ರೀತಿಯಲ್ಲಿ ಜಾರಿಗೊಳ್ಳಬೇಕಿದೆ. ನೆರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಕಾರ್ಯಕ್ರಮ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ಮುಂದೆ ಬರುವಂತೆ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಅದರ ಜತೆಯಲ್ಲಿ ಎಲ್ಲಾ ವರ್ಗದ ಬಡವರಿಗೂ ಉತ್ತಮ ಮಟ್ಟದ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು ಎಂದರು.
ಮೂರನೇ ಹಂತದ ಕೋವಿಡ್ ಅಲೆ ನಿರ್ವಹಣೆಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನೀಡಲಾಗುವ ಅನುದಾನವನ್ನು ಸರಿಯಾಗಿ ಬಳಕೆ ಮಾಡಬೇಕು. ಹೆಚ್ಚುವರಿ ಲ್ಯಾಬ್, ಅಗತ್ಯ ಪ್ರಮಾಣದ ಔಷಧಗಳ ಖರೀದಿ, ಮಕ್ಕಳ ವಾರ್ಡುಗಳ ನಿರ್ಮಾಣ, ಹೆಚ್ಚುವರಿ ಐಸಿಯುಗಳು, ಆಕ್ಸಿಜನ್ ಘಟಕಗಳ ಸ್ಥಾಪನೆ ಸಹಿತ ಇತರೆ ಮೂಲ ಸೌಲಭ್ಯಗಳನ್ನು ಒದಗಿಸಲು ಯೋಜನೆ ರೂಪಿಸಿಕೊಳ್ಳಬೇಕು. ಕೇಂದ್ರದಿಂದ ಅನುಮೋದನೆ ದೊರೆತ ಬಳಿಕ ರಾಜ್ಯದ ಯೋಜನೆಗಳ ಜತೆಗೆ ಅದನ್ನು ಹೊಂದಾಣಿಕೆ ಮಾಡಿಕೊಂಡು ಅನುಷ್ಠಾನಗೊಳಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್, ಆಯುಕ್ತ ಡಾ. ತ್ರಿಲೋಕ್ ಚಂದ್ರ, ಎನ್‌ಎಚ್‌ಎಂ ನಿರ್ದೇಶಕಿ ಡಾ. ಅರುಂಧತಿ ಚಂದ್ರಶೇಖರ್ ಸೇರಿದಂತೆ ಎಲ್ಲಾ ವಿಭಾಗಗಳ ಮುಖ್ಯಸ್ಥರು ಹಾಜರಿದ್ದರು.