ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರವಾಗಿ ನಾನು ಮತ ಕೇಳಲ್ಲ, ಯಾವುದೇ ಕಾರಣಕ್ಕೂ ಅವರ ಜೊತೆ ವೇದಿಕೆ ಹಂಚಿಕೊಳ್ಳಲ್ಲ ಎಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಗುಡುಗಿದ್ದಾರೆ.
ಯಲಹಂಕದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಸುಧಾಕರ್ ಅಧಿಕಾರದಲ್ಲಿದ್ದಾಗ ಯಾವ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರ ಹೆಸರನ್ನು ಹೇಳಿ ಮತ ಕೇಳಲು? ಬಿಜೆಪಿ ಗಾಗಿ ಹಾಗೂ ನರೇಂದ್ರ ಮೋದಿಗಾಗಿ ಮತ ಕೇಳುತ್ತೇನೆ. ಮೋದಿಯವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಿ ಮತಯಾಚಿಸುತ್ತೇನೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುತ್ತೇನೆ ಎಂದರು.