ಬೆಂಗಳೂರು: ಆಗಸ್ಟ್ 26ರಂದು ನಡೆಯಲಿರುವ ತಿರು ಓಣಂ ಹಬ್ಬದ ಹಿನ್ನೆಲೆಯಲ್ಲಿ ಕೇರಳಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವಿಶೇಷ ಬಸ್ ಸೇವೆ ಆರಂಭಿಸಲು ಸಿದ್ಧತೆ ನಡೆಸಿದೆ. ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಕೇರಳದ ವಿವಿಧ ನಗರಗಳಿಗೆ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.
ಆಗಸ್ಟ್ 21ರಿಂದ 25ರವರೆಗೆ ಬೆಂಗಳೂರಿನಿಂದ ಕೇರಳದ ಪ್ರಮುಖ ಸ್ಥಳಗಳಿಗೆ 90 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಕೇರಳದಿಂದ ಬೆಂಗಳೂರಿಗೆ ವಾಪಸ್ ಬರುವ ಪ್ರಯಾಣಿಕರಿಗಾಗಿ ಆಗಸ್ಟ್ 30ರಂದು ವಿಶೇಷ ಬಸ್‌ಗಳನ್ನು ಓಡಿಸಲಾಗುತ್ತದೆ.
ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಸ್ ನಿಲ್ದಾಣದಿಂದ ಕಣ್ಣೂರು, ಕೋಝಿಕ್ಕೋಡ್, ಎರ್ನಾಕುಲಂ, ಪಾಲಕ್ಕಾಡ್, ತ್ರಿಶೂರ್, ಕೊಟ್ಟಾಯಂ, ತಿರುವನಂತಪುರ ಸೇರಿದಂತೆ ಕೇರಳದ ಪ್ರಮುಖ ನಗರಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕೆಲವು ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುತ್ತದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳಿಗೆ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ನಾಲ್ಕು ಅಥವಾ ಹೆಚ್ಚು ಮಂದಿ ಒಟ್ಟಿಗೆ ಟಿಕೆಟ್ ಕಾಯ್ದಿರಿಸಿದರೆ ಶೇ.5ರಷ್ಟು ರಿಯಾಯಿತಿ ದೊರೆಯಲಿದೆ. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ಗಳನ್ನು ಒಟ್ಟಿಗೆ ಕಾಯ್ದಿರಿಸಿದರೆ ಹಿಂದಿರುಗುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುತ್ತದೆ.
ಟಿಕೆಟ್‌ಗಳನ್ನು ಕೆಎಸ್‌ಆರ್‌ಟಿಸಿಯ ಅಧಿಕೃತ ವೆಬ್‌ಸೈಟ್ www.ksrtc.karnataka.gov.in ಮೂಲಕ ಕಾಯ್ದಿರಿಸಬಹುದು. ಪ್ರಯಾಣಿಕರು ಟಿಕೆಟ್‌ನಲ್ಲಿರುವ ಬಸ್ ನಿಲ್ದಾಣ ಅಥವಾ ಪಿಕ್‌ಅಪ್ ಪಾಯಿಂಟ್ ವಿವರವನ್ನು ಪರಿಶೀಲಿಸಿ, ನಿಗದಿತ ಸ್ಥಳಕ್ಕೆ ತೆರಳುವಂತೆ ಸಂಸ್ಥೆ ಮನವಿ ಮಾಡಿದೆ.
ಕೇರಳ ಸೇರಿದಂತೆ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯ ಪ್ರಮುಖ ನಗರಗಳಲ್ಲಿರುವ ಕೆಎಸ್‌ಆರ್‌ಟಿಸಿ ಮುಂಗಡ ಕಾಯ್ದಿರಿಸುವಿಕೆ ಕೌಂಟರ್‌ಗಳಲ್ಲೂ ಟಿಕೆಟ್ ಬುಕ್ ಮಾಡಬಹುದು ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.







































































