ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ಸೆಸ್ ಹೆಚ್ಚಳ ವಿರೋಧಿಸಿ ರಾಜಕೀಯ ಪಕ್ಷಗಳು ಹೋರಾಟದ ಅಖಾಡಕ್ಕೆ ಇಳಿದಿದೆ. ಸೆಸ್ ಹೆಚ್ಚಳದಿಂದಾಗಿ ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ದರ ಹೆಚ್ಚಳವಾಗಿದೆ. ಸರ್ಕಾರದ ಕ್ರಮ ವಿಚಾರವಾಗಿ ಪ್ರತಿಪಕ್ಷಗಳು ಟೀಕಾಸ್ತ್ರ ಪ್ರಯೋಗಿಸುತ್ತಿವೆ.
ಈ ಟಿಕೆಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬೇರೆ ರಾಜ್ಯಗಳಿಂದ ಕರ್ನಾಟಕದಲ್ಲಿ ತೈಲ ದರ ಕಡಿಮೆ ಇದೆ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು 18.44% ಗೆ ಹೆಚ್ಚಳ ಮಾಡಿದೆ. ಈ ಏರಿಕೆಯ ನಂತರವೂ ಕರ್ನಾಟಕವು ತೈಲೋತ್ಪಾನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ ರಾಜ್ಯಕ್ಕಿಂತಲೂ ಕಡಿಮೆಯಿದೆ ಎಂದು ಸಿಎಂ ಮಾಹಿತಿ ಹಂಚಿಕೊಂಡಿದ್ದಾರೆ.
ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಸಂಪನ್ಮೂಲಗಳನ್ನು ಇತರೆ ರಾಜ್ಯಗಳಿಗೆ ಹಂಚಿಕೆ ಮಾಡುವ ದುರುದ್ದೇಶದಿಂದ ಕೇಂದ್ರ ಸರ್ಕಾರ ರಾಜ್ಯದ ಬಿಜೆಪಿ ಸರ್ಕಾರವನ್ನು ಬಳಸಿಕೊಂಡು ಕರ್ನಾಟಕದಲ್ಲಿ ಮೌಲ್ಯವರ್ಧಿತ ತೆರಿಗೆ ದರವನ್ನು ಕಡಿತಗೊಳಿಸುವಂತೆ ಮಾಡಿ, ತನ್ನ ಪಾಲಿನ ತೆರಿಗೆ ಹೆಚ್ಚಳ ಮಾಡುವ ಮೂಲಕ ಲಕ್ಷಾಂತರ ಕೋಟಿ ಸಂಗ್ರಹಿಸಿತ್ತು. ಈ ಅನರ್ಥ ನೀತಿಯಿಂದಾಗಿ ರಾಜ್ಯದ ರಾಜಸ್ವ ಸಂಗ್ರಹಕ್ಕೆ ದೊಡ್ಡ ಹೊಡೆತ ಬಿದ್ದರೆ, ಇದೇ ವೇಳೆ ಕೇಂದ್ರವು ಕನ್ನಡಿಗರಿಗೆ ದ್ರೋಹ ಬಗೆದು ಭರಪೂರ ತೆರಿಗೆ ಸಂಗ್ರಹಿಸಿತ್ತು ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು 18.44% ಗೆ ಹೆಚ್ಚಳ ಮಾಡಿದೆ. ಈ ಏರಿಕೆಯ ನಂತರವೂ ಕರ್ನಾಟಕವು ತೈಲೋತ್ಪಾನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ… pic.twitter.com/JKagDRzd0e
— CM of Karnataka (@CMofKarnataka) June 16, 2024
ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ರೂ. 9.21 ರಿಂದ ರೂ. 32.98 ಗೆ ಹಾಗೂ ಡೀಸೆಲ್ ಮೇಲೆ ರೂ. 3.45 ರಿಂದ ರೂ. 31.84 ಕ್ಕೆ ಹೆಚ್ಚಳ ಮಾಡಿತ್ತು. ಇದು ನಿಜವಾಗಿಯೂ ಜನರ ಮೇಲಿನ ಹೊರೆ. ಆಗಾಗ್ಗೆ ಕೇಂದ್ರ ಸರ್ಕಾರವು ತೆರಿಗೆ ಕಡಿತಗೊಳಿಸಿದ ಹೊರತಾಗಿಯೂ ಈಗಿನ ಅಬಕಾರಿ ಸುಂಕವು ಪೆಟ್ರೋಲ್ ಮೇಲೆ ರೂ. 19.9 ಹಾಗೂ ಡೀಸೆಲ್ ಮೇಲೆ ರೂ. 15.8 ಇದೆ. ನರೇಂದ್ರ ಮೋದಿ ಅವರ ಸರ್ಕಾರ ಜನಹಿತದ ದೃಷ್ಟಿಯಿಂದ ಈ ತೆರಿಗೆಯನ್ನು ಇಳಿಕೆ ಮಾಡಬೇಕು ಎಂದು ಸಿಎಂ ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರದ ಮೌಲ್ಯವರ್ಧಿತ ತೆರಿಗೆಯಲ್ಲಾದ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಸಲ್ಪಡುತ್ತದೆ ಎಂಬ ಗ್ಯಾರಂಟಿಯನ್ನು ನಾನು ನೀಡುತ್ತೇನೆ. ನಾವು ಸರ್ವರ ಹಿತಕಾಯಲು ಮತ್ತು ಜವಾಬ್ದಾರಿಯುತ ಸರ್ಕಾರವಾಗಿ ಮುನ್ನಡೆಯಲು ಬದ್ಧರಿದ್ದೇವೆ ಎಂದವರು ಭರವಸೆ ನೀಡಿದ್ದಾರೆ.