ಬೆಂಗಳೂರು: ವಿಡಿಯೋ ಮಾಡಿಕೊಂಡವರ ಕೃತ್ಯದ ಬಗ್ಗೆ ಮಾತನಾಡುವುದು ಬಿಟ್ಟು, ವಿಡಿಯೋ ಹಂಚಿಕೆಯ ಬಗ್ಗೆ ಮಾತನಾಡಲಾಗುತ್ತಿದೆ. ಇದರಲ್ಲಿ ಡಿ.ಕೆ.ಶಿವಕುಮಾರ್ ಅವರ ಮಧ್ಯ ಪ್ರವೇಶವಾಗಿಲ್ಲ” ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಕಿಡಿಕಾರಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಚೆಲುವರಾಯ ಸ್ವಾಮಿ, “ಈ ಹಗರಣದಲ್ಲಿ ಯಾವುದೇ ಕಾರಣಕ್ಕೂ ಡಿ.ಕೆ.ಶಿವಕುಮಾರ್ ಅವರು ಮಧ್ಯ ಪ್ರವೇಶ ಮಾಡಿಲ್ಲ. ನೂರಕ್ಕೆ ನೂರರಷ್ಟು ಈ ವಿಚಾರಕ್ಕೂ ಅವರಿಗೂ ಸಂಬಂಧವಿಲ್ಲ. ಅವರು ಟೀಕೆ ಮಾಡಿದ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷರು ತಿರುಗೇಟು ನೀಡಿದ್ದಾರೆ. ಈ ವಿಚಾರಕ್ಕೂ ಮೊದಲೇ ಇಬ್ಬರ ನಡುವೆ ಟೀಕೆ, ಟಿಪ್ಪಣಿಗಳು ನಡೆದಿವೆ ಎಂದರು.
ಈ ಅನಾಚಾರವನ್ನು ಯಾರೋ ವಿಡಿಯೋ ಮಾಡಿದ್ದಲ್ಲ. ಸ್ವತಃ ಅವರೇ ಮಾಡಿಕೊಂಡಿರುವುದು. ಇದು ಹಾಸನದಲ್ಲಿಯೇ ಎಲ್ಲರಿಗೂ ಹಂಚಿಕೆಯಾಗಿದೆ. ಸಾಮಾಜಿಕ ಜಾಲತಾಣಗಳಿಗೆ ಸೋರಿಕೆಯಾದ ನಂತರ ಯಾವುದೂ ಸಹ ಯಾರ ಹಿಡಿತಕ್ಕೂ ಸಿಗುವುದಿಲ್ಲ. ವಿಚಾರ ಗಾಳಿಗೆ ಹೋದ ಮೇಲೆ ಯಾವ ದಿಕ್ಕಿಗೆ ಹೋಗುತ್ತದೆ ಎನ್ನುವುದು ಯಾರಿಗೂ ತಿಳಿದಿಲ್ಲ ಎಂದ ಚೆಲುವರಾಯಸ್ವಾಮಿ, ಇಂತಹ ಸೂಕ್ಷ್ಮವಾದ ವಿಚಾರವನ್ನು ಜನತಾದಳದವರು ಬೀದಿ ರಂಪ ಮಾಡುತ್ತಿದ್ದಾರೆ. ಯಾವ ವಿಚಾರಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ತಿಳಿಯುತ್ತಿಲ್ಲ. ಯಾವ ಸಾಧನೆ ಮಾಡಿದ್ದಾರೆ ಎಂದು ಪ್ರತಿಭಟನೆಗೆ ರಾಜ್ಯದಾದ್ಯಂತ ಕರೆ ಕೊಟ್ಟಿದ್ದಾರೆ ಎಂದು ತಿಳಿದಿಲ್ಲ. ಈ ವಿಚಾರ ಬೇರೆ ದಿಕ್ಕಿಗೆ ಹೋಗಲಿ ಎಂದು ರಾಜಕೀಕರಣ ಮಾಡಲು ದಳದವರು ಹೊರಟಿದ್ದಾರೆ ಎಂದರು.
“ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟದಿಂದ ವಜಾ ಮಾಡಲು, ತೆಗೆದುಹಾಕಲು ಕೋಳಿ ಮರಿಯೇ? ಸಿದ್ದರಾಮಯ್ಯ, ರಾಹುಲ್ ಗಾಂಧಿ ಅವರನ್ನು ಏಕವಚನದಲ್ಲಿ ಸಂಬೋಧಿಸುತ್ತಿದ್ದಾರೆ. ಅವರು ತಾವೇ ಉನ್ನತಮಟ್ಟದ ವ್ಯಕ್ತಿ ಎಂದುಕೊಂಡಿದ್ದಾರೆ ಎಂದು ಹೆಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿದ ಚೆಲುಚರಾಯಸ್ವಾಮಿ, ಇಬ್ಬರ ನಡುವಿನ ದೂರವಾಣಿ ಸಂಭಾಷಣೆಯಲ್ಲಿ ಸಹ ಏನೂ ಇಲ್ಲ. ನಿನ್ನಿಂದ ಬಹಳ ಉಪಯೋಗವಾಗುತ್ತದೆ ಬಾ ಎಂದು ಹೇಳಿಲ್ಲ. ದೇವರಾಜೇಗೌಡ ಹಾಗೂ ಶಿವರಾಮೇಗೌಡ ಇಬ್ಬರೂ ಕೂಡ ಬಿಜೆಪಿ ನಾಯಕ ಆಗಿರುವ ಕಾರಣಕ್ಕೆ ಪೋನ್ ನೀಡಿದಾಗ ಮಾತನಾಡಿದ್ದಾರೆ. ಈ ವಿಚಾರದಲ್ಲಿ ಅವರ ಮಧ್ಯಪ್ರವೇಶವಾಗಿಲ್ಲ ಎಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್, ಎಐಸಿಸಿ ಸಂಶೋಧನಾ ವಿಭಾಗದ ಅಧ್ಯಕ್ಷ ರಾಜೀವ್ ಗೌಡ, ಶಾಸಕರಾದ ರಮೇಶ್ ಬಾಬು ಬಂಡ್ಢಿಸಿದ್ದೇಗೌಡ, ಗಣಿಗ ರವಿಕುಮಾರ್, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಕೆಪಿಸಿಸಿ ವಕ್ತಾರರೆ ಶ್ರೀಮತಿ ತೇಜಶ್ವಿನಿ ರಮೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮುಳಗುಂದ್ ಉಪಸ್ಥಿತರಿದ್ದರು..