ಬೆಂಗಳೂರು: ಕೇಂದ್ರ ಸರ್ಕಾರ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದು ಮಾಡಿರುವ ರೀತಿಯಲ್ಲೇ ರಾಜ್ಯ ಸರ್ಕಾರವೂ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಪಡಿಸಿದೆ.
ಕೊರೋನಾ ಸೋಂಕು ನಿರೀಕ್ಷಿತ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಕೇಂದ್ರ ಸರ್ಕಾರ ಈಗಾಗಲೇ ಸಿಬಿಎಸ್‌ಇ ಹಾಗೂ ಐಸಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಹೀಗಾಗಿ ರಾಜ್ಯದಲ್ಲೂ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಿ ಎಂಬ ಮನವಿಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದರು.
ಪಿಯುಸಿ ಪರೀಕ್ಷೆ ರದ್ದಾಗಿದೆಯಾದರೂ, ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕಳೆದ ವರ್ಷ 9 ನೇ ತರಗತಿ ಪರೀಕ್ಷೆ ನಡೆದಿಲ್ಲ CBSE ನಲ್ಲಿ ಮೂರು ತಿಂಗೊಳಿಗೊಮ್ಮೆ ವಿದ್ಯಾರ್ಥಿಗಳ ಇವ್ಯುಲೇಶನ್ ನಡೆಯುತ್ತೆ. ನಮ್ಮಲ್ಲಿ ಆ ಪದ್ಧತಿ ಇಲ್ಲ. ಹೀಗಾಗಿ ಎರಡು ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದವರು ತಿಳಿಸಿದರು. ಜುಲೈ 3ನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಸುಳಿವನ್ನು ಅವರು ನೀಡಿದರು.