ಬೆಂಗಳೂರು: ರಾಜ್ಯಾದ್ಯಂತ ಹಲವು ದಿನಗಳಿಂದ ಇಳಿಮುಖವಾಗಿದ್ದ ಮಳೆಯ ಪ್ರಮಾಣ ಬುಧವಾರ ಮತ್ತೆ ಏರಿಕೆಯಾಗಿದೆ. ಆಗಸ್ಟ್ 5ರಿಂದ 8ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 6ರವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಬುಹುತೇಕ ಎಲ್ಲ ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆಗಸ್ಟ್ 5 ಮತ್ತು 6ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.