ಬೆಂಗಳೂರು: ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಮತ್ತು ಬಂಗಾಳ ಕೊಲ್ಲಿಯ ಮೇಲ್ಮೈ ಸುಳಿಗಾಳಿ ಸೃಷ್ಟಿಸಿದ ಅವಾಂತರದಿಂದಾಗಿ ದಕ್ಷಿಣದ ರಾಜ್ಯಗಳು ನಲುಗಿವೆ. ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಭಾರೀ ಮಳೆ ಅವಾಂತರ ಸೃಷ್ಟಿಸಿದೆ. ಆಂದ್ರಪ್ರದೇಶ, ತೆಲಂಗಾಣದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.
ರಾಜ್ಯದಲ್ಲಿ ಗುರುವಾರ ಇಡೀ ದಿನ ಭಾರೀ ಮಳೆಯಾಗಿದ್ದು, ಶನಿವಾರದವರೆಗೂ ಈ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಗಳಿವೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಕನ್ನಡ ಒಳನಾಡು ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ. ಶನಿವಾರದವರೆಗೂ ಭಾರೀ ಮಳೆಯ ಮುನ್ಸೂಚನೆ ವ್ಯಕ್ತವಾಗಿದ್ದು ಹಲವು 13 ಜಿಲ್ಲೆಗಳಲ್ಲಿ ಕಚ್ಚೆಚ್ಚರ ವಹಿಸಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಶಿವಮೊಗ್ಗ ಮತ್ತು ರಾಮನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಎಚ್ಚರಿಕೆ ವಹಿಸುವಂತೆ, ಮುಂಜಾಗ್ರತ ಕ್ರಮಗಳೊಂದಿಗೆ ಸಿದ್ಧರಾಗಿರುವಂತೆ ಸೂಚಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರೀ ಮಳೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಈ ಪರಿಸ್ಥಿತಿ ಇರಲಿದ್ದು, ಬೆಂಗಳೂರಿನಲ್ಲಿ ಕನಿಷ್ಠ 19 ಮತ್ತು ಗರಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಳೆಯ ಜೊತೆಗೆ ಬೆಂಗಳೂರು ಚಳಿಗೆ ತತ್ತರಿಸಿದೆ.