ತಿರುವನಂತಪುರ: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೇರಳ ತತ್ತರಗೊಂಡಿದೆ. ಧಾರಾಕಾರ ಮಳೆಯಾಗುತ್ತಿದ್ದು, ಪ್ರವಾಹ ಹಾಗೂ ಸರಣಿ ಭೂಕುಸಿತಗಳು 18 ಜನರನ್ನು ಬಲಿ ತೆಗೆದುಕೊಂಡಿದೆ.
ಕೊಟ್ಟಾಯಂನ ಬಳಿ ಭೂಕುಸಿತದಿಂದ ಭಾರಿ ಸಾವು ನೋವಿ ಸಂಭವಿಸಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ. ಹಲವು ಮನೆಗಳಿಗೆ ಹಾನಿಯಾಗಿವೆ. ವಾಹನಗಳೂ ಜಖಂಗೊಂಡಿವೆ. ಶನಿವಾರವೂ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಂಗಳವಾರದವರೆಗೂ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರ್ನಾಟಕದಲ್ಲೂ ಕಟ್ಟೆಚ್ಚರ
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಗುತ್ತಿದ್ದು, ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಚಿಕ್ಕಮಗಳೂರು ಹಾಗೂ ಚಾಮರಾಜನಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಮನಗರ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿ
ಬೆಂಗಳೂರಿನಲ್ಲಿ ಇಂದು ಮಳೆ ಮುಂದುವರಿಯುವ ನಿರೀಕ್ಷೆಯಿದ್ದು, ನಂತರ ಸುಮಾರು ಎರಡು ದಿನಗಳ ಮಳೆ ಕಡಿಮೆಯಾಗಬಹುದು ಎಂದು ಅಂದಾಜಿಸಲಾಗಿದೆ. ಆದರೂ ಈ ವಿರಾಮದ ನಂತರ ಮಳೆ ಚಟುವಟಿಕೆ ಮತ್ತೊಮ್ಮೆ ಬೆಂಗಳೂರಿನಲ್ಲಿ ಹೆಚ್ಚುವ ನಿರೀಕ್ಷೆಯಿದೆ ಮತ್ತು ತಿಂಗಳು ಪೂರ್ತಿ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.