ಬೆಂಗಳೂರು: ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು ಜನಜೀವನ ಏರುಪೇರಾಗಿದೆ. ರಾಜಧಾನಿ ಬೆಂಗಳೂರಿನಲಿ ರಾತ್ರಿಯಿಂದಲೇ ಜಿಟಿಜಿಟಿ ಮಳೆಯಾಗುತ್ತಿದೆ. ಈ ಮಳೆ ರಾಜ್ಯವ್ಯಾಪಿ ಮೂರು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಆಂಧ್ರಪ್ರದೇಶ, ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಕೂಡ ಇನ್ನೆರಡು ದಿನ ನಳೆ ಮುಂದುವರಿಯುವ ಮುನ್ಸೂಚನೆ ಇದೆ. ಹಾಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ನವೆಂಬರ್ 20ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸಹಿತ ಕರಾವಳಿ ಜಿಲ್ಲೆಗಳಲ್ಲು ಮಳೆ ಮುನ್ಸೂಚನೆ ವ್ಯಕ್ತವಾಗಿದೆ.
ಒಳನಾಡಿನ ಜಿಲ್ಲೆಗಳಲ್ಲೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಅದರಲ್ಲೂ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಮತ್ತು ಕೊಪ್ಪಳದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ. ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ಪಶ್ಚಿಮಘಟ್ಟದ ಜಿಲ್ಲೆಗಳಿಗೆ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.