ಬೆಂಗಳೂರು: ಬೆಂಗಳೂರಿನ ಏರ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಚರ್ಚೆ ನಡೆಸಿದರು.
ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ, ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿನಲ್ಲಿ ಹೆಣ್ಣು ಮಕ್ಕಳಿಗೆ ಮತ್ತು ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಗಂಡು ಮಕ್ಕಳಿಗೆ ಬೆಳಗಾವಿ ಭಾಗದಲ್ಲಿ ಆದ್ಯತೆಯ ಮೇರೆಗೆ ಸೈನಿಕ ಶಾಲೆ ಪ್ರಾರಂಭಿಸಬೇಕೆಂದು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಿದರು.
ಈ ಕುರಿತು ಪ್ರಧಾನಮಂತ್ರಿಗೂ ಪತ್ರ ಬರೆದು ಮನವಿ ಸಲ್ಲಿಸಲಾಗುವುದು ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.