ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿ ಘೋಷಿಸುವಂತೆ ಒತ್ತಾಯಿಸಿ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು, ಫೆ. 21ರಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಲಿದ್ದಾರೆ.
ಉತ್ತರ ಕರ್ನಾಟಕದ ಜೀವನಾಡಿ ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮತಿ ಪಡೆಯುವುದು ಮತ್ತು ರಾಜ್ಯದ ಹಲವು ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಪಡೆಯುವುದೂ ಸೇರಿದಂತೆ ಹಲವು ಯೋಜನೆಗಳ ಕುರಿತಂತೆ ಸಚಿವ ರಮೇಶ್ ಜಾರಕಿಹೊಳಿ ಅವರ ನೇತೃತ್ವದ ಉನ್ನತ ಅಧಿಕಾರಿಗಳ ನಿಯೋಗ, ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.
ಪೆ. 22ರಂದು ಅಂತರ್ ರಾಜ್ಯ ಜಲವಿವಾದಗಳಿಗೆ ಸಂಬಂಧಿಸಿ, ರಾಜ್ಯದ ಅಡ್ವೋಕೇಟ್ ಜನರಲ್ ಮತ್ತು ಹಿರಿಯ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಯಲಿದೆ.
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಪ್ರಕ್ರಿಯೆ ಕೊನೆಯ ಹಂತದಲ್ಲಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆಯನ್ನೂ ಸಹಾ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವುದರಿಂದ ರಾಜ್ಯಕ್ಕೆ ಹಲವು ರೀತಿಯ ಲಾಭವಾಗಲಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.